ಅಶೋಕ ಪಟ್ಟಣಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಮದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಬೆಳಗಾವಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಅಶೋಕ ಪಟ್ಟಣ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ರಾಮದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಸಂಪುಟದಲ್ಲಿ ಅಶೋಕ ಪಟ್ಟಣ ಅವರನ್ನು ಕಡೆಗಣಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಶೋಕ ಪಟ್ಟಣ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಅಶೋಕ ಪಟ್ಟಣ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿ ದಶೆಯಿಂದಲೇ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ದುಡಿದಿರುವ ಅವರು ಪಕ್ಷದ ನಿಷ್ಠಾವಂತ ನಾಯಕರಾಗಿದ್ದಾರೆ. ಅಲ್ಲದೆ ಅವರ ತಂದೆ ಹಾಗೂ ತಾಯಿಯೂ ಶಾಸಕರಾಗಿ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಹಿನ್ನೆಲೆಯೂ ಅವರಿಗೆ ಇದೆ. ಇಂತಹ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡದಿರುವುದು ಕ್ಷೇತ್ರದ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ರಾಮದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೆ ಸಮರ್ಪಕ ಸಚಿವ ಸ್ಥಾನ ಪ್ರಾತಿನಿಧ್ಯ ದೊರೆತಿಲ್ಲ. ಜಿಲ್ಲೆಯ ಹಿರಿಯ ಶಾಸಕರಾಗಿರುವ ಅಶೋಕ ಪಟ್ಟಣ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಸಂಪುಟ ವಿಸ್ತರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಪಕ್ಷದ ಕಾರ್ಯಕರ್ತರಿಗೆ ತೀವ್ರ ನಿರಾಸೆ ಉಂಟುಮಾಡಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡ್ರ ಹೇಳಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಾದ ರಮೇಶ ಬಂಡಿವಡ್ಡರ, ಬಸವರಾಜ ಪ್ರಧಾನಿ, ಹನುಮಂತ ಕುಲಗೋಡ, ಇಮಾಮಸಾಬ ಕಬಾಡಗಿ, ಕುಮಾರ ರಾಠೋಡ, ಸಾಗರ ಮುನವಳ್ಳಿ, ಸಲೀಂ ಖತೀಬ್, ಸಾಗರ ಜಾಧವ್, ಶೈಬ್ ನಲವಡೆ, ಶಫೀದ್ ಚೋರಬ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.






