ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ : 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಿಸುವ ಭರವಸೆ ನೀಡಿದ ಬೈರತಿ ಸುರೇಶ್

ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ.
ಸೋಮವಾರ ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು.
ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು. ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಬೈರತಿ ಸುರೇಶ್ ಭರವಸೆ ನೀಡಿದರು.
ಆದರೆ, ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.







