Belagavi | ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ, ಮೇ 11: ಹುಟ್ಟುಹಬ್ಬದ ದಿನದಂದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಕಾವೇರಿ ಉಮೇಶ ನಾಯಕ (21) ಎಂದು ಗುರುತಿಸಲಾಗಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ನಿವಾಸಿಯಾಗಿದ್ದ ಕಾವೇರಿ, ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾಸವಿದ್ದು, ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಮಾಹಿತಿ ಪ್ರಕಾರ, ಸೋಮವಾರ (ಮೇ11)ಕಾವೇರಿಯ ಹುಟ್ಟುಹಬ್ಬವಾಗಿದ್ದು, ಕುಟುಂಬಸ್ಥರು, ಸ್ನೇಹಿತರು ಹಾಗೂ ಭಾವಿ ಪತಿ ಶುಭಾಶಯ ಕೋರಿದ್ದರು. ವಾಟ್ಸ್‌ಆ್ಯಪ್ ಸ್ಟೇಟಸ್‌ಗಳಲ್ಲೂ ಶುಭಾಶಯಗಳ ಸಂದೇಶ ಹರಿದಾಡುತ್ತಿತ್ತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲರೊಂದಿಗೆ ಖುಷಿಯಾಗಿ ಮಾತನಾಡುತ್ತಿದ್ದ ಕಾವೇರಿ, ಬಳಿಕ ತನ್ನ ಕೊಠಡಿಯನ್ನು ಒಳಗಡೆಯಿಂದ ಲಾಕ್ ಮಾಡಿಕೊಂಡಿದ್ದಾಳೆ.
ಮಧ್ಯಾಹ್ನ ಊಟಕ್ಕೆ ಕರೆಯಲು ಹಾಸ್ಟೆಲ್ ಸಿಬ್ಬಂದಿ ಬಾಗಿಲು ತಟ್ಟಿದಾಗ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಯಿತು. ಬಳಿಕ ಬಾಗಿಲು ತೆರೆಯಲಾಗಿದ್ದು, ಕಾವೇರಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಘಟನೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯ ಪೋಷಕರು, ಎಪಿಎಂಸಿ ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾವೇರಿಗೆ ಮೂರು ತಿಂಗಳ ಹಿಂದೆ ಪೊಲೀಸ್ ಪೇದೆಯೊಬ್ಬರೊಂದಿಗೆ ನಿಶ್ಚಿತಾರ್ಥವಾಗಿತ್ತು ಎನ್ನಲಾಗಿದೆ.
ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.






