Belagavi | 3ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಆಕ್ರೋಶ

ಬೆಳಗಾವಿ : ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ರೈತ ಮುಖಂಡ ಪ್ರೇಮ್ ಚೌಗಲಾ ಅವರು ಉರಿಬಿಸಿಲಿನಲ್ಲೇ ಅರೆಬೆತ್ತಲೆಯಾಗಿ ಉರುಳು ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹತ್ತರಗಿ ಟೋಲ್ ಗೇಟ್ನಿಂದ ಆರಂಭವಾದ ರೈತರ ಪಾದಯಾತ್ರೆ ಮುಂದುವರಿದಿದ್ದು, ಬಿಸಿಲನ್ನೂ ಲೆಕ್ಕಿಸದೆ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ತಮ್ಮ ಬೇಡಿಕೆಗಳ ಬಗ್ಗೆ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.
‘ರೈತರ ಸಂಕಷ್ಟಗಳಿಗೆ ಸ್ಪಂದಿಸದ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರೈತರ ಪಾಲಿಗೆ ಸರಕಾರ ಸತ್ತಂತಾಗಿದೆ ಎಂದು ಆಕ್ರೋಶ ಹೊರಹಾಕಿದರು. ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನೂ ನೀಡಿದರು.




