Belagavi | ಲಾರಿ-ಕಾರು ಮುಖಾಮುಖಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು; ಮೂವರಿಗೆ ಗಾಯ

ಬೆಳಗಾವಿ : ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ರವಿವಾರ ನಡೆದಿದೆ.
ಮೃತರನ್ನು ಪುಣೆ ಮೂಲದ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಹಾಗೂ ನಾಲ್ಕು ವರ್ಷದ ಬಾಲಕ ದೇವಾಂಶ ಶ್ರೀಕಾಂತ ಮಾಂಡ್ರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಶ್ರೀಕಾಂತ ಮಾಂಡ್ರಿ (36), ವಂದನಾ (53) ಹಾಗೂ ಹರ್ಷ (25) ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪುಣೆಯಿಂದ ಸವದತ್ತಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಹಾವೇರಿಯಿಂದ ಗೋಕಾಕಿಗೆ ಹತ್ತಿಕಾಳು ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ, ಭಾರೀ ಪ್ರಮಾಣದಲ್ಲಿ ಮೆಕ್ಕೆಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕ ತುರ್ತಾಗಿ ಬ್ರೇಕ್ ಹಾಕಿದ ಪರಿಣಾಮ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






