Belagavi | ಎಥೆನಾಲ್ ಮಿಶ್ರಿತ ಪೆಟ್ರೋಲ್ನಿಂದ ಇಂಜಿನ್ ಸಮಸ್ಯೆ ದೂರು; ನಗರದ 3 ಬಂಕ್ಗಳ ಇಂಧನ ಮಾದರಿ ಪ್ರಯೋಗಾಲಯಕ್ಕೆ ರವಾನೆ

ಸಾಂದರ್ಭಿಕ ಚಿತ್ರ | PC : Image by magnific
ಬೆಳಗಾವಿ : ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಇಂಜಿನ್ಗಳಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂಬ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಜಿಲ್ಲಾಡಳಿತವು, ಇಂಧನದ ಗುಣಮಟ್ಟ ಪರಿಶೀಲನೆಗೆ ಮುಂದಾಗಿದೆ. ನಗರದ ಮೂರು ಪೆಟ್ರೋಲ್ ಬಂಕ್ಗಳಿಂದ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಅಧಿಕೃತ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣದಿಂದಾಗಿ ವಾಹನಗಳ ಇಂಜಿನ್ ಕಾರ್ಯಕ್ಷಮತೆ ಕುಸಿಯುತ್ತಿದೆ ಮತ್ತು ಕೆಲವು ವಾಹನಗಳ ಇಂಜಿನ್ಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬಂದಿವೆ. ಈ ದೂರುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಗರದ ಮೂರು ಬಂಕ್ಗಳಿಂದ ಇಂಧನದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ ಎಂದು ವಿವರಿಸಿದರು.
ಪ್ರಯೋಗಾಲಯದಲ್ಲಿ ಪೆಟ್ರೋಲ್ನ ಗುಣಮಟ್ಟ ಹಾಗೂ ಎಥೆನಾಲ್ ಮಿಶ್ರಣದ ಪ್ರಮಾಣ ಸೇರಿದಂತೆ ಅಗತ್ಯ ತಾಂತ್ರಿಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ವರದಿ ಬಂದ ಬಳಿಕ ಪೆಟ್ರೋಲ್ ಗುಣಮಟ್ಟದ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದ್ದು, ಒಂದು ವೇಳೆ ನಿಗದಿತ ಮಾನದಂಡಗಳ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಪೆಟ್ರೋಲ್ ಬಂಕ್ಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಹಮ್ಮದ್ ರೋಷನ್ ಎಚ್ಚರಿಕೆ ನೀಡಿದರು.




