Belagavi | ಬೆಂಕಿ ಅವಘಡ: ಒಂದೇ ಕುಟುಂಬದ ನಾಲ್ವರು ಸಜೀವ ದಹನ; ಇಬ್ಬರು ಗಂಭೀರ
ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ

ಬೆಳಗಾವಿ: ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂಬವರು ಮೃತಪಟ್ಟಿದ್ದಾರೆ.
ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ ಎನ್ನಲಾಗಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬವೇ ಬೆಂಕಿಗೆ ಸಿಲುಕಿ ದುರಂತ ಅಂತ್ಯ ಕಂಡಿದ್ದು, ಚೌತಿ ಹಬ್ಬದ ಸಂಭ್ರಮದ ನಡುವೆಯೇ ನಡೆದ ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.






