Belagavi | ಜಲಶುದ್ಧೀಕರಣ, ತ್ಯಾಜ್ಯ ಘಟಕಗಳ ಪರಿಶೀಲನೆ : ವರದಿ ಸಲ್ಲಿಸಲು ಉಪ ಲೋಕಾಯುಕ್ತರ ಸೂಚನೆ

ಬೆಳಗಾವಿ : ನಗರದ ಜಲಶುದ್ಧೀಕರಣ ಘಟಕ ಹಾಗೂ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟಕಗಳಿಂದ ಸುತ್ತಮುತ್ತಲಿನ ಗ್ರಾಮಗಳ ಜನರ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ತ್ಯಾಜ್ಯ ಘಟಕದ ಸುತ್ತಮುತ್ತ ಬೆಳೆಯುವ ಬೆಳೆಗಳು ಹಾಗೂ ತರಕಾರಿಗಳ ಸ್ಥಿತಿಗತಿ, ವಾಯುಮಾಲಿನ್ಯ, ಹಾಲಿನ ಗುಣಮಟ್ಟ, ಮಕ್ಕಳ ಆರೋಗ್ಯ ತಪಾಸಣೆ, ನಾಯಿ ಕಡಿತ ಪ್ರಕರಣಗಳು ಮತ್ತು ಕುಡಿಯುವ ನೀರಿನ ಪರೀಕ್ಷಾ ವರದಿಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಘಟಕದಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಸುತ್ತಮುತ್ತಲಿನ ಗ್ರಾಮಸ್ಥರು, ತ್ಯಾಜ್ಯ ವಿಲೇವಾರಿ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಉಪಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪನಿಬಂಧಕ ಅರವಿಂದ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






