ಪಂಚಮಸಾಲಿ ಸಮುದಾಯಕ್ಕೆ 2 ‘ಎ’ ಮೀಸಲಾತಿ, ಟ್ರ್ಯಾಕ್ಟರ್ ರ‍್ಯಾಲಿಗೆ ನಿರ್ಬಂಧ : ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ-2 ‘ಎ’ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಟ್ರ್ಯಾಕ್ಟರ್ ರ‍್ಯಾಲಿ’ಗೆ ಜಿಲ್ಲಾಡಳಿತ ನಿರ್ಬಂಧ ಹೇರಿದ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.
ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಧಾನಸಭೆ ಸಭಾಂಗಣದೊಳಗಿನ ನವೀಕೃತ ಸ್ಪೀಕರ್ ಪೀಠದ ಮಹತ್ವ ವಿವರಿಸುವ ವೇಳೆ ಅನುಭವ ಮಂಟಪದ ತೈಲವರ್ಣ ಚಿತ್ರವನ್ನು ಅನಾವರಣ ಮಾಡಲಾಗಿದೆ ಎಂದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಸುನೀಲ್ ಕುಮಾರ್, ನಿಮ್ಮ ಪೀಠದ ಮಹತ್ವ ಹೇಳಿದ್ದೀರಿ ಒಳ್ಳೆಯದು. ಆದರೆ, ವಕ್ಫ್ ಆಸ್ತಿ ಹೆಸರಿನಲ್ಲಿ ಮಠಮಾನ್ಯಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದರು. ಇದಕ್ಕೆ ಧ್ವನಿಗೂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಪಂಚಮಸಾಲಿ ಮಠದ ಶ್ರೀಗಳ ಹೋರಾಟಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಗಮನ ಸೆಳೆದರು.
ಪಂಚಮಸಾಲಿ ಸಮುದಾಯದ ನ್ಯಾಯಯುತ ಬೇಡಿಕೆಗಾಗಿ ಹೋರಾಟ ಮಾಡಲು ಈ ಸರಕಾರ ಅವಕಾಶ ನೀಡುತ್ತಿಲ್ಲ. ನಿರ್ಬಂಧ ಹೇರುವ ಮೂಲಕ ಸರಕಾರ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ದೂರಿದ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ್, ಸ್ಪೀಕರ್ ಪೀಠದ ಮುಂದಿನ ಭಾವಿಗಿಳಿದು ಧರಣಿಗೆ ಮುಂದಾದರು. ಕಲಾಪದಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಪೀಕರ್ ಖಾದರ್ ಕಲಾಪವನ್ನು ಭೋಜನ ವಿರಾಮಕ್ಕೆ ಮುಂದೂಡಿದರು.
ಹೋರಾಟ ನಿಲ್ಲದು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಟ್ಯ್ರಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಕಾಲ್ನಡಿಗೆ ಮೂಲಕವೇ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಅಲ್ಲಿಯೂ ತಡೆದರೆ, ವಿಧಾನಸೌಧದ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ರಾಜ್ಯ ಸರಕಾರ ಹೋರಾಟ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದು, ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಹೇರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನೋಡಿದರೆ ನಾವು ಕರ್ನಾಟಕದಲ್ಲಿ ಜೀವನ ನಡೆಸುತ್ತಿದ್ದೇವೆಯೋ ಅಥವಾ ಜಮ್ಮು–ಕಾಶ್ಮೀರದಲ್ಲಿ ವಾಸಿಸುತ್ತಿದ್ದೇವೆಯೋ ಎಂಬ ಅನುಮಾನ ಮೂಡುತ್ತಿದೆ. ಸರಕಾರ ಏನೇ ನಿರ್ಬಂಧ ಹೇರಿದರೂ ನಮ್ಮ ಹೋರಾಟ ನಿಲ್ಲದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು.
ಪ್ರತಿಭಟನೆಗೆ ನಿರ್ಬಂಧವಿಲ್ಲ: ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಹೋರಾಟ ಮಾಡಲಿಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ, 5 ಸಾವಿರ ಟ್ರ್ಯಾಕ್ಟರ್ ರ‍್ಯಾಲಿ ಮಾಡಲು ಮುಂದಾಗಿರುವ ಮಾಹಿತಿ ಇದ್ದು, ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಿದರೆ ಸದನ ನಡೆಸಲು ಕಷ್ಟ ಸಾಧ್ಯ. ಹೀಗಾಗಿ ಟ್ರ್ಯಾಕ್ಟರ್ ರ‍್ಯಾಲಿ ಕೈಬಿಟ್ಟು ಜನರು ಹೋರಾಟ ಮಾಡಲಿಕ್ಕೆ ಯಾವುದೇ ನಿರ್ಬಂಧವಿಲ್ಲ’
-ಡಾ.ಜಿ.ಪರಮೇಶ್ವರ್, ಗೃಹ ಸಚಿವ







