ಬೆಳಗಾವಿ ಅಧಿವೇಶನ | ವಿಧಾನಸಭೆಯಲ್ಲಿ ಹಲವು ವಿಧೇಯಕ ಅಂಗೀಕಾರ

ಬೆಳಗಾವಿ : ವಿಧಾನಸಭೆಯಲ್ಲಿ 2025ನೆ ಸಾಲಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಸೇರಿದಂತೆ ಹಲವು ವಿಧೇಯಕಗಳು ಅಂಗೀಕಾರಗೊಂಡವು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಶಾಸನ ರಚನೆ ಕಲಾಪದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, 2025ನೆ ಸಾಲಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025ನೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಕೋರಿದರು.
ಬಳಿಕ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಪರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು 2025ನೆ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೆ ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಕೋರಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, 2025ನೆ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ(ತಿದ್ದುಪಡಿ) ವಿಧೇಯಕ ಮಂಡಿಸಿದರು. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು, 2025ನೆ ಸಾಲಿನ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2025ನೆ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕಗಳನ್ನು ಅನುಮೋದನೆ ಕೋರಿದರು. ಎಲ್ಲ ವಿಧೇಯಕಗಳನ್ನು ಪರ್ಯಾಲೋಚಿಸಿ ಧ್ವನಿಮತ ಮೂಲಕ ಅಂಗೀಕಾರಿಸಲಾಯಿತು.







