ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆ ಕೈಗೊಳ್ಳಿ : ಸಭಾಧ್ಯಕ್ಷರ ಸೂಚನೆ
ʼಸಚಿವರು, ಶಾಸಕರಿಗೆ ಸೂಕ್ತ ವಸತಿ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಿʼ

ಬೆಳಗಾವಿ : ಡಿ.2ರಿಂದ 11ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲದ ಅಧಿವೇಶನವನ್ನು ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಗೊಳಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಸೂಚಿಸಿದರು.
ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಅಧಿವೇಶನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿವೇಶನಕ್ಕೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಬದ್ಧತೆಯಿಂದ ನಿರ್ವಹಿಸಬೇಕು. ಅಧಿವೇಶನದ ವೇಳೆ ಎದುರಾಗುವ ಸಮಸ್ಯೆಗಳನ್ನು ತಕ್ಷಣ ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಧಿವೇಶನಕ್ಕೆ ಸಂಬಂಧಿಸಿದ ಪಾಸ್ ಗಳ ವಿತರಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಪಾಸ್ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಸೂಕ್ತ ಸಮಯ ನಿಗದಿಪಡಿಸಬೇಕು ಎಂದು ಸೂಚಿಸಿದರು.
ಅಧಿವೇಶನದ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕರು ತಂಗುವ ಸ್ಥಳಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಶಾಲಾ ಮಕ್ಕಳಿಗೆ ಯೋಗ ತರಬೇತಿ, ಪುಸ್ತಕ ಮೇಳ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ತಿಳಿಸಿದರು.
ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಮಾತನಾಡಿ, ಅಧಿವೇಶನಕ್ಕೆ ಆಗಮಿಸುವ ಹಿರಿಯ ಸಚಿವರು ಮತ್ತು ಶಾಸಕರಿಗೆ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸಬೇಕು. ಸಚಿವರು ಹಾಗೂ ಶಾಸಕರು ತಂಗುವ ಹೋಟೆಲ್ಗಳಲ್ಲಿ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕು. ಸುವರ್ಣ ವಿಧಾನಸೌಧದಲ್ಲಿಯೂ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಂಬ್ಯುಲೆನ್ಸ್ ಸಿದ್ಧವಾಗಿರಬೇಕು ಎಂದು ಸೂಚಿಸಿದರು.
ಅಧಿವೇಶನ ಆರಂಭವಾಗುವ ಎರಡು ದಿನಗಳ ಮುಂಚಿತವಾಗಿ ಎಲ್ಲ ಗಣಕಯಂತ್ರಗಳು ಹಾಗೂ ಇಂಟರ್ನೆಟ್ ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ದೂರವಾಣಿ ಸಂಖ್ಯೆಗಳು ಮತ್ತು ಸುವರ್ಣ ವಿಧಾನಸೌಧದಲ್ಲಿನ ಸಚಿವರ ಕೊಠಡಿಗಳ ವಿವರಗಳನ್ನು ಒಳಗೊಂಡ ಕೈಪಿಡಿಯನ್ನು ಸಚಿವರು, ಶಾಸಕರು ಹಾಗೂ ಅವರ ಆಪ್ತ ಸಹಾಯಕರಿಗೆ ತಲುಪಿಸಬೇಕು ಎಂದರು.
ಅಧಿವೇಶನಕ್ಕಾಗಿ ರಚಿಸಲಾಗಿರುವ 12 ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ಸಭಾಪತಿ ಸಲೀಂ ಅಹ್ಮದ್ ಹೇಳಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿವೇಶನದ ಪೂರ್ವಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಕಳೆದ ವರ್ಷದಂತೆ ಈ ಬಾರಿಯೂ ಅಧಿವೇಶನದ ಯಶಸ್ಸಿಗಾಗಿ 12 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ತಿಳಿಸಿದರು.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ವಸತಿ, ಊಟೋಪಹಾರ ಮತ್ತು ಸಾರಿಗೆ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಆರ್. ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ, ಪೊಲೀಸ್ ಆಯುಕ್ತ ನಿಕಮ್ ಪ್ರಕಾಶ್ ಅಮ್ರಿತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭಾಂಗಣ, ಮೊಗಸಾಲೆ ಪರಿಶೀಲನೆ :
ಸಭೆಗೂ ಮುನ್ನ ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಅವರು ಸುವರ್ಣ ವಿಧಾನಸೌಧದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸಭಾಂಗಣಗಳು, ಮೊಗಸಾಲೆ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಹಾಗೂ ವಾಚನಾಲಯ ಸೇರಿದಂತೆ ವಿವಿಧ ಸ್ಥಳಗಳನ್ನು ಜಂಟಿಯಾಗಿ ಪರಿಶೀಲಿಸಿದರು. ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.






