4,500 ಕೋಟಿ ರೂ. ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ : ಸಚಿವ ಮಧು ಬಂಗಾರಪ್ಪ

ಬೆಳಗಾವಿ (ಅಥಣಿ) : ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 1.16ಕೋಟಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸುಮಾರು 4,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು(ಕೆಪಿಎಸ್)ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರು ಪಿ.ಕೆ.ಗ್ರಾಮದ ಉನ್ನತೀಕರಿಸಿದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪೂರ್ವ ಪ್ರಾಥಮಿಕದಿಂದ ಪಿಯುಸಿಯ ವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೊದಲ ಹಂತದಲ್ಲಿ 1,200ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಿದೆ ಎಂದು ಹೇಳಿದರು.
ಕೆಪಿಎಸ್ ಶಾಲೆಗಳಿಗೆ ಉಚಿತ ಸರಕಾರಿ ಶಾಲಾ ವಾಹನ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ. ದ್ವಿಭಾಷಾ ನೀತಿಯನ್ನು ಜಾರಿಗೆ ತರಲಾಗಿದೆ. ಈಗಾಗಲೇ 13,500ಶಿಕ್ಷಕರ ನೇಮಕ ಮಾಡಲಾಗಿದ್ದು, ಹೆಚ್ಚುವರಿಯಾಗಿ 17,500 ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅಝೀಂ ಪ್ರೇಮ್ಜಿ ಫೌಂಡೇಶನ್ ಸರಕಾರಿ ಶಾಲೆಗಳ ಮಕ್ಕಳಿಗೆ ಮೊಟ್ಟೆ ವಿತರಣೆಗೆ 1,591ಕೋಟಿ ರೂ.ನೀಡುತ್ತಿದೆ. ಮುಂದಿನ ವರ್ಷದಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ-ಪುಸ್ತಕಗಳ ಜೊತೆಗೆ ಉಚಿತ ನೋಟ್ಬುಕ್ಗಳನ್ನೂ ವಿತರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಸರಕಾರಿ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರಕಾರ ಹಲವು ಯೋಜನೆ ರೂಪಿಸಿದೆ. ಇದರಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆಯು ಒಂದು. ನಾಗನೂರು ಪಿ.ಕೆ.ಗ್ರಾಮದ ಸರಕಾರಿ ಶಾಲೆಯನ್ನು ಮುಂದೆ ‘ಕರ್ನಾಟಕ ಪಬ್ಲಿಕ್ ಶಾಲೆ’(ಕೆಪಿಎಸ್)ಯಾಗಿ ಉನ್ನತೀಕರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಘೋಷಿಸಿದರು.
1926ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಸಚಿವ ಲಕ್ಷ್ಮಣ ಸವದಿಯವರ ತಂದೆಯೂ ವಿದ್ಯಾಭ್ಯಾಸ ಮಾಡಿದ್ದರು. ನಂತರ ಲಕ್ಷ್ಮಣ ಸವದಿ ಅವರು ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುವ ಮೂಲಕ ಇಂದು ಭವ್ಯ ಶಾಲೆಯಾಗಿ ರೂಪುಗೊಳ್ಳಲು ಕಾರಣರಾಗಿದ್ದಾರೆ ಎಂದ ಅವರು, ಹಣ ಕೊಟ್ಟು ವಸ್ತುಗಳನ್ನು ಖರೀದಿಸಬಹುದು. ಆದರೆ ಶಿಕ್ಷಣವನ್ನು ಹಾಗೆ ಪಡೆಯಲು ಸಾಧ್ಯವಿಲ್ಲ. ಶಿಕ್ಷಣ ನಿರಂತರವಾಗಿ ದೊರೆಯಬೇಕು. ಅದನ್ನು ಶಿಕ್ಷಕರಿಂದ ಮಾತ್ರ ಸಮರ್ಥವಾಗಿ ನೀಡಲು ಸಾಧ್ಯ. ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ನನ್ನ ತಂದೆ, ಮಾಜಿ ಸಿಎಂ ಎಸ್.ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರಿ ಶಾಲೆಗಳಲ್ಲಿ ಓದಿ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ ತಮಗೆ ಸರಕಾರಿ ಶಾಲೆಯಲ್ಲಿ ಓದುವ ಅವಕಾಶ ಸಿಗದೆ ಕಾನ್ವೆಂಟ್ನಲ್ಲಿ ವಿದ್ಯಾಭ್ಯಾಸ ಮಾಡಬೇಕಾಯಿತು ಎಂದ ಅವರು, ನಾನು ಶಿಕ್ಷಣ ಸಚಿವನಾದ ಬಳಿಕ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನನ್ನ ಶಾಲೆ, ನನ್ನ ಜವಾಬ್ದಾರಿ' ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೇನೆ. ಈ ಕಾರ್ಯಕ್ರಮದಡಿ ಅಂದಿನ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ, ಅವರು ವಿದ್ಯಾಭ್ಯಾಸ ಮಾಡಿದ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ 10ಲಕ್ಷ ರೂ.ನೀಡುವಂತೆ ಮನವಿ ಮಾಡಿದ್ದೆ. ಬಳಿಕ ಅವರ ಸಹಕಾರದಿಂದ 10 ಲಕ್ಷ ರೂ.ಪಡೆದು ಅವರು ಓದಿದ ಶಾಲೆಯ ಅಭಿವೃದ್ಧಿಗೆ ಬಳಸಲಾಯಿತು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮಿ, ಸಹಕಾರಿ ಸಚಿವ ಲಕ್ಷ್ಮಣ ಸವದಿ, ಪರಿಷತ್ ಸದಸ್ಯ ಹಣಮಂತ ನಿರಾಣಿ, ಶಿಕ್ಷಣ ಇಲಾಖೆ ಧಾರವಾಡದ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಅಥಣಿ ತಹಶೀಲ್ದಾರ್ ಸಿದ್ರಾಮ ಬೋಸಗಿ, ಉಪ ವಿಭಾಗಾಧಿಕಾರಿ ಸುಭಾಸ ಸಂಪಗಾವಿ, ಎಸ್ಡಿಎಂಸಿ ಅಧ್ಯಕ್ಷ ಕಾಶಿನಾಥ ಸವದಿ ಉಪಸ್ಥಿತರಿದ್ದರು.






