Belagavi | ಮಹಿಳಾ ಪಿಎಸ್ಐ ಅಶ್ಲೀಲ ವಿಡಿಯೋ ಪ್ರಕರಣ: ಹಿಂಡಲಗಾ ಜೈಲಿನ ಘನತೆಗೆ ಧಕ್ಕೆ ಆರೋಪ, ನ್ಯಾಯಾಲಯಕ್ಕೆ ಖಾಸಗಿ ದೂರು

ಬೆಳಗಾವಿ: ಮಹಿಳಾ ಪಿಎಸ್ಐಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಘನತೆಗೆ ಧಕ್ಕೆ ತಂದ ಆರೋಪದವರೆಗೆ ತಲುಪಿದೆ. ಜೈಲಿನ ಕುರಿತು ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಪ್ರಸಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂಡಲಗಾ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕರು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಹಿಂಡಲಗಾ ಕೇಂದ್ರ ಕಾರಾಗೃಹದ ಘನತೆಗೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ ನಾಗರಾಜ್ ಸೇರಿದಂತೆ ಕೆಲವರ ವಿರುದ್ಧ ಖಾಸಗಿ ದೂರು ಸಲ್ಲಿಸಲಾಗಿದೆ. ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಮಹಾಂತೇಶ ಅವರ ಮೂಲಕ ಈ ಖಾಸಗಿ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಖಾಸಗಿ ವ್ಯಕ್ತಿಯೊಬ್ಬರಿಗೆ ಮಹಿಳಾ ಪಿಎಸ್ಐ ಬೆತ್ತಲಾಗಿ ವಿಡಿಯೋ ಕಾಲ್ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ವಿಡಿಯೋ ಪೋಸ್ಟ್‌ನಲ್ಲಿ ಮಹಿಳಾ ಪಿಎಸ್ಐ ಬೆತ್ತಲಾಗಿ ವಿಡಿಯೋ ಕಾಲ್ ಮಾಡಿರುವ ಘಟನೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೇ ನಡೆದಿದೆ ಎಂಬ ರೀತಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಅಲ್ಲದೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾರಾಗೃಹ ಸುಧಾರಣೆ ಇಲಾಖೆಯ ಎಡಿಜಿಪಿ ಅವರ ಭಾವಚಿತ್ರಗಳನ್ನು ಬಳಸಿಕೊಂಡು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದರೆ, ಮಹಿಳಾ ಪಿಎಸ್ಐಗೂ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜೈಲಿನ ಹೆಸರನ್ನು ಬಳಸಿಕೊಂಡು ಅಶ್ಲೀಲ ವಿಡಿಯೋ ಹರಿಬಿಡುವ ಮೂಲಕ ಕಾರಾಗೃಹದ ಘನತೆಗೆ ಧಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಈ ಹಿಂದೆ ಹಿಂಡಲಗಾ ಜೈಲಿನಲ್ಲಿ ಇದ್ದ ತುಮಕೂರು ಮೂಲದ ಕೈದಿ ಸಾಯಿಕುಮಾರ್ ವಿರುದ್ಧವೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಜೈಲಿನ ಕುರಿತು ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಪ್ರಸಾರ ಮಾಡಿದ ಆರೋಪಿಗಳ ವಿರುದ್ಧ ಬಿಎನ್‌ಎಸ್ 356 ಮತ್ತು 356 ಅಡಿ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.






