ಕರ್ನಾಟಕ ಬಂದ್ಗೆ ಬೆಳಗಾವಿಯಲ್ಲಿ ವ್ಯಾಪಕ ಬೆಂಬಲ: ಬಡಾಲ ಅಂಕಲಗಿಯಲ್ಲಿ ಟೈರ್ಗೆ ಬೆಂಕಿ, ರಸ್ತೆ ತಡೆ
ಕಬ್ಬಿಗೆ ಟನ್ಗೆ 5,500 ರೂ. ನೀಡುವಂತೆ ಆಗ್ರಹ

ಬೆಳಗಾವಿ: ರಾಜ್ಯಾದ್ಯಂತ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಬೀದಿಗಿಳಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದು, ಹಲವು ಗ್ರಾಮಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಹಲವು ವಾಹನಗಳನ್ನು ತಡೆದು, ಟೈರ್ಗಳಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಚಕ್ಕಡಿಗಳನ್ನು ಅಡ್ಡಲಾಗಿ ನಿಲ್ಲಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಕೆಲ ರೈತರು ವಾಹನಗಳ ಮುಂದೆ ಮಲಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಸಮರ್ಪಕ ಬೆಲೆ ನೀಡುತ್ತಿಲ್ಲ ಎಂದು ಆರೋಪಿಸಿರುವ ರೈತರು, ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸಿ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬಂದ್ ಸೇರಿದಂತೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆಯಿದ್ದು, ಇದರಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.






