Ballari | ವಿಎಸ್‌ಕೆ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ (ವಿಎಸ್‌ಕೆವಿವಿ) ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ, ಆಡಳಿತಾತ್ಮಕ ಹಾಗೂ ಶುಲ್ಕ ಸಂಬಂಧಿತ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯದ ಆವರಣದಲ್ಲಿ ಜಮಾಯಿಸಿದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ್ ಕುಳಗೇರಿ ಮಾತನಾಡಿ, ಕಳೆದ ಸೆಮಿಸ್ಟರ್‌ನ ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಆದರೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಬಹುತೇಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದು ಮೌಲ್ಯಮಾಪನ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಗುಣಮಟ್ಟದ ಕುರಿತು ಅನುಮಾನ ಮೂಡಿಸಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಮತ್ತು ಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಂಚಾಲಕ ಕೆ. ದಿಲೀಪ್ ಕುಮಾರ್, ಪ್ರಮುಖರಾದ ಸಂದೀಪ್ ಅರಳಗುಂಡಿ, ಜಿ. ಕಿರಣ್ ಗೌಡ, ರಘು, ಪ್ರಜ್ವಲ್, ದೇವೇಂದ್ರ, ಮಹೇಶ್, ಮನೋಜ್, ಮಾರುತಿ, ಸಾಗರ್, ಹೇಮಂತ್, ಶರಣಬಸವ, ಓಂಕಾರ್ ಗೌಡ, ಗೋವಿಂದ, ಮಂಜುನಾಥ್, ಮಹೇಶ್ವರಿ, ಜಯಶ್ರೀ, ಕೆ. ಲಕ್ಷ್ಮಿ, ಭಾರತಿ, ಭಾಗ್ಯಲಕ್ಷ್ಮಿ ಸೇರಿದಂತೆ ಇತರರು ಭಾಗವಹಿಸಿದ್ದರು.






