Ballari | ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬ ಮಾಡಿದರೆ ಕ್ರಮ: ಎಂ.ರಾಮಪ್ಪ ಎಚ್ಚರಿಕೆ
ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮೂಲಕ ಸಮುದಾಯದ ಫಲಾನುಭವಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳು ಮತ್ತು ಯೋಜನೆಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ನಿಗಮದ ಅಧ್ಯಕ್ಷ ಎಂ.ರಾಮಪ್ಪ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಹಾಗೂ ಸಹಾಯಧನಗಳು ಸಕಾಲದಲ್ಲಿ ದೊರೆಯಬೇಕು. ಅರ್ಜಿಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಬಡ ಹಾಗೂ ಮಧ್ಯಮ ವರ್ಗದ ಜನರು ಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಪಾರದರ್ಶಕವಾಗಿ ಯೋಜನೆಗಳನ್ನು ತಲುಪಿಸಬೇಕು ಎಂದು ಸೂಚಿಸಿದರು.
ಸಣ್ಣ ಮೊತ್ತದ ಸಾಲ ಹಾಗೂ ಸರ್ಕಾರಿ ಯೋಜನೆಗಳಿಗೂ ಬ್ಯಾಂಕ್‌ಗಳು ಕಠಿಣ ಸಿಬಿಲ್ ನಿಯಮಗಳನ್ನು ಅನ್ವಯಿಸುತ್ತಿರುವುದರಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ಕುಲಕರ್ಣಿ, ನಿಯಮಗಳ ಸಡಿಲಿಕೆ ಕುರಿತು ಬ್ಯಾಂಕರ್‌ಗಳ ಮಟ್ಟದಲ್ಲಿ ಚರ್ಚಿಸಲಾಗುವುದು. ಬಾಕಿ ಇರುವ ಪ್ರಕರಣಗಳನ್ನು ಮುಂಬರುವ ಡಿಸಿಸಿ/ಡಿಎಲ್‌ಆರ್‌ಸಿ ಸಭೆಯಲ್ಲಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ :
ಜಿಲ್ಲಾ ಕೇಂದ್ರದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಭವನ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಾಗ ಗುರುತಿಸಿದ ಕೂಡಲೇ ಅಡಿಪಾಯ ಹಾಕಲಾಗುವುದು. ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ರಾಮಪ್ಪ ತಿಳಿಸಿದರು.
2011ರ ಜನಗಣತಿಯಲ್ಲಿ ಜಿಲ್ಲೆಯ ಭೋವಿ ಸಮುದಾಯದ ಜನಸಂಖ್ಯೆ ಕಡಿಮೆ ದಾಖಲಾಗಿದೆ. ಹೀಗಾಗಿ, ಪ್ರತಿ ಗ್ರಾಮ ಮತ್ತು ಕಾಲೋನಿಗಳಲ್ಲಿರುವ ಸಮುದಾಯದ ನಿಖರ ಜನಸಂಖ್ಯೆಯನ್ನು ಗುರುತಿಸಿ, ಕಂದಾಯ ಅಧಿಕಾರಿಗಳ ದೃಢೀಕರಣದೊಂದಿಗೆ ತಹಶೀಲ್ದಾರ್‌ಗೆ ಸಲ್ಲಿಸಬೇಕು ಎಂದು ಮುಖಂಡರಿಗೆ ಸಲಹೆ ನೀಡಿದರು.
ಕೂಲಿ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಶಾಲೆ ಹಾಗೂ ಹಾಸ್ಟೆಲ್‌ಗಳಿಗೆ ಸೇರಿಸಲು ಶಿಕ್ಷಕರು ಮತ್ತು ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ತಹಶೀಲ್ದಾರ್‌ಗಳು ನಿರ್ಲಕ್ಷ್ಯ ತೋರಿದರೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು. ಸ್ವಸಹಾಯ ಮಹಿಳಾ ಸಂಘಗಳನ್ನು ರಚಿಸಿ, ಅವುಗಳಿಗೆ ಸಾಲ ಸೌಲಭ್ಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ನಿಗಮದ ಜಿಲ್ಲಾ ವ್ಯವಸ್ಥಾಪಕ ಅರುಣ್ ಕುಮಾರ್ ಮಾತನಾಡಿ, 2022–23ರಿಂದ 2025–26ರವರೆಗೆ ಆನ್‌ಲೈನ್ ಮೂಲಕ 4,679 ಅರ್ಜಿಗಳು ಸಲ್ಲಿಕೆಯಾಗಿವೆ. ಕೆಲವು ಅರ್ಜಿಗಳು ಆಯ್ಕೆ ಪಟ್ಟಿ ಹಾಗೂ ಬ್ಯಾಂಕ್ ಹಂತದಲ್ಲಿ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸುಮಾ, ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಹಾಗೂ ಡಿವೈಎಸ್ಪಿ ಗೋವಿಂದರಾಜು ಉಪಸ್ಥಿತರಿದ್ದರು.






