Ballari | ಹಸಿರು ಪಟಾಕಿ ಹೊರತುಪಡಿಸಿ ಉಳಿದ ನಿಷೇಧಿತ ಪಟಾಕಿಗಳ ಮಾರಾಟಕ್ಕೆ ನಿರ್ಬಂಧ: ಡಿಸಿ ನಾಗೇಂದ್ರ ಪ್ರಸಾದ್ ಕೆ.

ಬಳ್ಳಾರಿ: ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಉಳಿದ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಹಾಗೂ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆಯಂತೆ ವಾಯುಮಾಲಿನ್ಯ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ತಾಲ್ಲೂಕುವಾರು ಜಂಟಿ ತಪಾಸಣಾ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷ ತಪಾಸಣಾ ತಂಡಗಳ ರಚನೆ :
ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಡಿವೈಎಸ್ಪಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಜೆಸ್ಕಾಂ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪರಿಸರ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ.
ತಾಲ್ಲೂಕು ಮಟ್ಟದಲ್ಲಿ ತಂಡಗಳ ನಿಯೋಜನೆ :
ಸಿರುಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕುಗಳಲ್ಲಿ ಆಯಾ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್, ನಗರಸಭೆ ಅಥವಾ ಪುರಸಭೆಯ ಮುಖ್ಯಾಧಿಕಾರಿಗಳು, ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಜೆಸ್ಕಾಂ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ನಿಯೋಜಿಸಲಾಗಿದೆ.
ಅನಧಿಕೃತ ಮಳಿಗೆಗಳ ಪರಿಶೀಲನೆಗೆ ಆದೇಶ :
ಜಿಲ್ಲೆಯಾದ್ಯಂತ ಅನಧಿಕೃತವಾಗಿ ಪಟಾಕಿ ಸಂಗ್ರಹಿಸುವ ಅಥವಾ ಮಾರಾಟ ಮಾಡುವ ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಜಂಟಿ ತಪಾಸಣೆ ನಡೆಸಬೇಕು. ಹೊಸ ಪರವಾನಗಿ ನೀಡುವ ಮತ್ತು ನವೀಕರಿಸುವ ಮುನ್ನ ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ತಾತ್ಕಾಲಿಕ ಮಳಿಗೆಗಳಲ್ಲಿ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಪೊಟ್ಟಣಗಳ ಮೇಲಿರುವ ಅಧಿಕೃತ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಪರಿಶೀಲಿಸುವುದು ಕಡ್ಡಾಯವಾಗಿದೆ. ಪರವಾನಗಿ ಇಲ್ಲದೆ ಅಥವಾ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವವರ ವಿರುದ್ಧ ದಾಳಿ ನಡೆಸಿ, ತಕ್ಷಣವೇ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.






