Ballari | ನಿಡುಗುರ್ತಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ ಕಾರ್ಯಕ್ರಮ

ಸಂಡೂರು/ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ದಾಖಲಾದ ಮಕ್ಕಳಿಗಾಗಿ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಗುರುವಾರ ವಿಜೃಂಭಣೆಯಿಂದ ಆಯೋಜಿಸಲಾಯಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿ ಮಕ್ಕಳ ಶಿಕ್ಷಣ ಪಯಣಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯಗುರುಗಳಾದ ಎ. ಯರ್ರಿಸ್ವಾಮಿ, “ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು. ನಮ್ಮ ದೇಶವು ಸಂಸ್ಕಾರ, ಸಂಪ್ರದಾಯ ಮತ್ತು ಮೌಲ್ಯಗಳಿಂದ ಸಮೃದ್ಧವಾಗಿದೆ. ಹಿಂದಿನ ಕಾಲದಲ್ಲಿ ಮಕ್ಕಳನ್ನು ಗುರುಕುಲಕ್ಕೆ ಕಳುಹಿಸುವ ಮೊದಲು ಅಕ್ಷರಾಭ್ಯಾಸ ಮಾಡಿಸುವ ಪದ್ಧತಿ ಇತ್ತು. ಇಂತಹ ಉತ್ತಮ ಪರಂಪರೆಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಹೇಳಿದರು.
ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕ-ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಕ್ಕಳ ಪ್ರಗತಿಗೆ ಸಹಕರಿಸಬೇಕು. ಸರ್ಕಾರವು ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವುದರಿಂದ ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನಂತರ ಮಾತನಾಡಿದ ಸಿಆರ್‌ಪಿ ನಾಗರಾಜ್, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಹೇಳಿದರು. ಶಾಲೆಯಲ್ಲಿ ಕಲಿತ ಪಾಠಗಳನ್ನು ಮನೆಯಲ್ಲಿಯೂ ಅಭ್ಯಾಸ ಮಾಡಿಸುವ ಮೂಲಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ತಾಯಂದಿರು ತಟ್ಟೆಗಳಲ್ಲಿ ಅಕ್ಕಿ, ಬಾಳೆಹಣ್ಣು ಹಾಗೂ ತೆಂಗಿನಕಾಯಿ ತಂದು ಶಾರದಾ ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಅಕ್ಕಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಅವರ ವಿದ್ಯಾಭ್ಯಾಸ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಂಪ್ರದಾಯಬದ್ಧ ಆಚರಣೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಡ್ಡೆಪ್ಪ ಗುರಿಕಾರ, ಪದನಿಮಿತ್ತ ಮುಖ್ಯಗುರು ಡಿ. ಬಸಪ್ಪ, ಶಿಕ್ಷಕರಾದ ಶಶಿಧರ, ಶ್ವೇತಾ, ಕಿರಣ್ ಕುಮಾರ್, ಸ್ವಾಮಿ, ವೆಂಕಟೇಶ್, ಮಲ್ಲಿಕಾರ್ಜುನ ಹಾಗೂ ದೊಡ್ಡ ಬಸವರಾಜ ಸೇರಿದಂತೆ ಪಾಲಕ-ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.






