‘ಬಳ್ಳಾರಿ ಚಲೋ’ ಪಾದಯಾತ್ರೆಯಿಂದ ಸರ್ಕಾರಕ್ಕೆ ನಡುಕ: ಬಿ.ವೈ.ವಿಜಯೇಂದ್ರ

ಸಿಂಧನೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಕೆಪಿಎಸ್‌ಸಿ ಹಾಗೂ ವಾಲ್ಮೀಕಿ ನಿಗಮದ ಹಗರಣಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ನಡುಕ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಬಳ್ಳಾರಿ ಚಲೋ ಪಾದಯಾತ್ರೆಯ ಮೂರನೇ ದಿನವಾದ ಗುರುವಾರ ಕುನ್ನಟಗಿ ಗ್ರಾಮದ ಹನುಮಪ್ಪ ಚಲುವಾದಿ ಅವರ ಹೊಲದಲ್ಲಿ ರೈತ ಮಹಿಳೆಯರೊಂದಿಗೆ ಊಟ ಮಾಡಿದ ಬಳಿಕ ‘ವಾರ್ತಾಭಾರತಿ’ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ ಎಂದರು.
ಬಿಜೆಪಿ ಪಾದಯಾತ್ರೆಗೆ ಹೆದರಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಹಾಗೂ ಶಾಸಕರು ಇದೀಗ ಬರ ವೀಕ್ಷಣೆಗೆ ತೆರಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಈಗ ನಿದ್ದೆಗಣ್ಣಿನಿಂದ ಹೊರಬಂದಿದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.
2028ರಲ್ಲಿ ಅಧಿಕಾರಕ್ಕೆ ಬಂದರೆ ಶಾಶ್ವತ ಪರಿಹಾರ: ನೀರಾವರಿ ಯೋಜನೆಗಳಿಗೆ ಬಿಜೆಪಿ ಮೊದಲಿನಿಂದಲೂ ವಿಶೇಷ ಆದ್ಯತೆ ನೀಡುತ್ತಾ ಬಂದಿದೆ. 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಲು ಬಜೆಟ್‌ನಲ್ಲಿ 1,000 ಕೋಟಿ ರೂ. ಘೋಷಿಸಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರಕ್ಕೆ ರೈತರು ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಕಾಳಜಿಯಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ರೈತರು ಕಣ್ಣೀರು ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ತುರ್ತು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದೆ. ಸರ್ಕಾರಕ್ಕೆ ರೈತರಿಗಿಂತ ಬಿಡದಿ ಟೌನ್‌ಶಿಪ್ ಮುಖ್ಯವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 3,655 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಕಲ್ಯಾಣ ಕರ್ನಾಟಕದಲ್ಲಿ 936 ಹಾಗೂ ಕಲಬುರಗಿ ಜಿಲ್ಲೆಯಲ್ಲಿ 294 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಬೇಕು ಎಂದು ಸವಾಲು ಹಾಕಿದರು. ರಾಯಚೂರಿನಲ್ಲಿ 160ಕ್ಕೂ ಹೆಚ್ಚು, ಬೀದರ್‌ನಲ್ಲಿ 220 ಹಾಗೂ ಕೊಪ್ಪಳದಲ್ಲಿ 80ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಹಿತವನ್ನು ಮರೆತು ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.
ಮೈತ್ರಿ ಧರ್ಮ ಪಾಲಿಸುತ್ತಿದ್ದೇವೆ: ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿವೆ. ಪ್ರಸ್ತುತ ಜೆಡಿಎಸ್ ಬಿಡದಿ ಹಾಗೂ ನೈಸ್ ವಿಚಾರವಾಗಿ ಹೋರಾಟ ನಡೆಸುತ್ತಿದ್ದರೆ, ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸುತ್ತಿದೆ. ಎರಡೂ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮೈತ್ರಿ ಧರ್ಮವನ್ನು ಪಾಲಿಸುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದರು.






