Ballari | ಸಂಡೂರು ಕ್ಷೇತ್ರದಲ್ಲಿ 48.65 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಸಂಡೂರು (ಬಳ್ಳಾರಿ): ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ ಒಟ್ಟು 48.65 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಬಳ್ಳಾರಿ ಸಂಸದ ಈ. ತುಕಾರಾಂ ಹಾಗೂ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಅವರು ಶನಿವಾರ ಜಂಟಿಯಾಗಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ತಾಲೂಕಿನ ಡಿ. ಅಂತಾಪುರ ಗ್ರಾಮದಲ್ಲಿ 70 ಲಕ್ಷ ರೂ. ಸಿಎಸ್ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಅನುದಾನದಡಿ ನಿರ್ಮಿಸಲಾಗುತ್ತಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಕಟ್ಟಡ ಹಾಗೂ ಚಿಕ್ಕ ಅಂತಾಪುರ ಗ್ರಾಮದಲ್ಲಿ ಬೇಡರ ಕಣ್ಣಪ್ಪ ದೇವಸ್ಥಾನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಇದೇ ವೇಳೆ ಡಿ. ಅಂತಾಪುರ ಗ್ರಾಮದ 2.5 ಎಕರೆ ವಿಸ್ತೀರ್ಣದಲ್ಲಿ 47.95 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬೃಹತ್ ವಿದ್ಯುತ್ ಯೋಜನೆಗೂ ಚಾಲನೆ ನೀಡಲಾಯಿತು. ಯೋಜನೆಯಡಿ 110/33 ಕೆ.ವಿ. ಹಾಗೂ 2×20 ಎಂ.ವಿ.ಎ. ಸಾಮರ್ಥ್ಯದ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆ, 14.98 ಕಿ.ಮೀ. ಉದ್ದದ ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ ಕೆಐಎಡಿಬಿ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯ ವೃದ್ಧಿ ಕಾಮಗಾರಿಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಈ. ತುಕಾರಾಂ, ಗ್ರಾಮೀಣ ಭಾಗದ ಜನರಿಗೆ ನಿರಂತರ ವಿದ್ಯುತ್ ಪೂರೈಕೆ ಹಾಗೂ ಉತ್ತಮ ಬ್ಯಾಂಕಿಂಗ್ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಹಕಾರಿಯಾಗಲಿವೆ. ಕ್ಷೇತ್ರದ ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖಂಡ ತುಮಟಿ ಲಕ್ಷ್ಮಣ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ನೂರುದ್ದೀನ್, ಪ್ರಮುಖ ನಾಯಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.






