Ballari | ಪ್ರಜಾಸೇವಾ ಆಂದೋಲನ: ಸಣಾಪುರದಲ್ಲಿ 298 ಅರ್ಜಿಗಳು ಸ್ವೀಕಾರ

ಬಳ್ಳಾರಿ/ಕಂಪ್ಲಿ: ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸುವ ಹಾಗೂ ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ, ಪಿಂಚಣಿ, ಜಾತಿ ಪ್ರಮಾಣಪತ್ರ, ಜೆಸ್ಕಾಂ ಸೇರಿದಂತೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಸಾರ್ವಜನಿಕರ ಅಹವಾಲುಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ, ಹಲವು ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಅಧಿಕಾರಿಗಳ ಸಮ್ಮುಖದಲ್ಲಿ ಕ್ರಮ ಕೈಗೊಳ್ಳಲಾಯಿತು. ವಿವಿಧ ಇಲಾಖೆಗಳ ಯೋಜನೆಗಳ ಕುರಿತು ವಸ್ತು ಪ್ರದರ್ಶನಗಳನ್ನೂ ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಒಟ್ಟು 298 ಅರ್ಜಿಗಳು ಸ್ವೀಕೃತವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 274, ಸರ್ವೆ ಇಲಾಖೆಗೆ 10, ಕಂದಾಯ ಇಲಾಖೆಗೆ 4, ಜೆಸ್ಕಾಂಗೆ 3, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 3, ಆಹಾರ ಇಲಾಖೆಗೆ 2 ಹಾಗೂ ಕೆಎಸ್‌ಆರ್‌ಟಿಸಿ ಮತ್ತು ಶಿಕ್ಷಣ ಇಲಾಖೆಗೆ ತಲಾ ಒಂದು ಅರ್ಜಿ ಸಲ್ಲಿಕೆಯಾಯಿತು.
ಇದೇ ವೇಳೆ ಆನ್‌ಲೈನ್ ಅರ್ಜಿ ಕೌಂಟರ್‌ಗಳಲ್ಲಿ ಸರ್ವರ್ ಸಮಸ್ಯೆ ಉಂಟಾದ ಕಾರಣ ಅರ್ಜಿದಾರರು ಕೆಲಕಾಲ ತೊಂದರೆ ಅನುಭವಿಸಿದರು. ನಂತರ ಸಂಬಂಧಿತ ಇಲಾಖೆಗಳು ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿವೆ.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ. ಶ್ರೀಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮೋಹನ್ ಕಾಳಾಪುರ, ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






