Ballari | ಪ್ರಜಾಪ್ರಭುತ್ವ ಬಲಪಡಿಸಲು ಜವಾಬ್ದಾರಿಯುತ ಮತದಾನ ಅಗತ್ಯ: ಶಾಸಕಿ ಅನ್ನಪೂರ್ಣ ತುಕಾರಾಂ
ಸಂಡೂರು ಗುರುಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸಂಡೂರು/ಬಳ್ಳಾರಿ: ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರಜೆಗಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಜವಾಬ್ದಾರಿಯುತ ಮತದಾನವೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಮುಖ ಸಾಧನವಾಗಿದೆ ಎಂದು ಸಂಡೂರು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜನರಿಂದ, ಜನರಿಗೋಸ್ಕರ, ಜನರಿಗಾಗಿ ಇರುವ ಸರ್ಕಾರವೇ ಪ್ರಜಾಪ್ರಭುತ್ವ” ಎಂಬ ಅಬ್ರಹಾಂ ಲಿಂಕನ್ ಅವರ ಮಾತು ಪ್ರಜಾಪ್ರಭುತ್ವದ ಮೂಲ ಆಶಯವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಪ್ರಜೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಆಡಳಿತದಲ್ಲಿ ಭಾಗಿಯಾಗುವುದು ಪ್ರತಿನಿಧಿ ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರೂ ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸಬೇಕು ಎಂದು ಕರೆ ನೀಡಿದರು.
ಭಾರತೀಯ ಸಂವಿಧಾನದ 61ನೇ ತಿದ್ದುಪಡಿಯ ಮೂಲಕ ಮತದಾನದ ವಯೋಮಿತಿಯನ್ನು 21ರಿಂದ 18 ವರ್ಷಕ್ಕೆ ಇಳಿಸಿರುವುದು ಯುವಜನತೆಗೆ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಿದೆ. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಮತದಾನದ ಹಕ್ಕನ್ನು ಬಳಸಬೇಕು ಎಂದು ತಿಳಿಸಿದರು.
ಜವಾಬ್ದಾರಿಯುತ ಮತದಾನವು ಉತ್ತಮ ಆಡಳಿತಕ್ಕೆ ದಾರಿ ಮಾಡಿಕೊಡಲಿದ್ದು, ಭ್ರಷ್ಟಾಚಾರ ರಹಿತ, ಸುಭದ್ರ ಹಾಗೂ ಜನಪರ ಆಡಳಿತ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಇಒ ಮಡಗಿನ ಬಸಪ್ಪ, ತಹಶೀಲ್ದಾರ್ ಅನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ, ಸಮಾಜ ಕಲ್ಯಾಣ ಇಲಾಖೆಯ ವೆಂಕಟೇಶ್, ಸಿಡಿಪಿಒ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಬಿಕೆಜಿ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.






