ಬಳ್ಳಾರಿ | ಜ.1ರಿಂದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ : ರಾಜೇಶ್ ಎನ್.ಹೊಸಮನೆ

ಬಳ್ಳಾರಿ,ಡಿ.29: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದೊಂದಿಗೆ ಜ.1 ರಿಂದ 30 ರವರೆಗೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಸೇವೆಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‌ಜಿಓ ಸಂಸ್ಥೆಗಳಲ್ಲಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ/ಖಾಸಗಿ ಸಂಸ್ಥೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್‌ವಿ ಮತ್ತು ಎನ್‌ಜಿಓ ಪ್ರತಿನಿಧಿಗಳನ್ನು ಒಳಗೊಂಡಂತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ನಿರ್ದೇಶಿಸಲಾಗಿದೆ ಎಂದಿದ್ದಾರೆ.
ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ, ಬೀದಿ ನಾಟಕ ಮತ್ತು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಸಂಚಾರಿ ನಿಯಮಗಳ ಪಾಲನೆ ಸರಿಯಾಗಿ ಆಗುತ್ತಿಲ್ಲವಾದ್ದರಿಂದ ರಸ್ತೆಯ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅಪಘಾತಗಳನ್ನು ಕಡಿಮೆ ಮಾಡಲು ಜನರಲ್ಲಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಹಮ್ಮಿಕೊಂಡಿರುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರು ಶ್ರಮಿಸಬೇಕು. ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆಯವರು ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ ಹಾಗೂ ಲಗೇಜುಗಳ ತಪಾಸಣೆ ನಡೆಸಬೇಕು.
ಅಪ್ರಾಪ್ತರು ವಾಹನಗಳನ್ನು ಚಲಾಯಿಸುವಂತಿಲ್ಲ. ನಗರದಲ್ಲಿ ವಾಹನಗಳ ಸಂಖ್ಯೆಯು ಹೆಚ್ಚಾಗಿದ್ದು, ಅವುಗಳನ್ನು ಸರಿಯಾದ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು. ಅದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಸೂಕ್ತ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಬೇಕು.18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದ್ದು, ಅವರ ಪೋಷಕರ ಮೇಲೆ ಪ್ರಕರಣ ದಾಖಲಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು.
ಈ ಎಲ್ಲಾ ರಸ್ತೆ ಸುರಕ್ಷತೆಯ ಬಗ್ಗೆ ಇರುವ ಎಲ್ಲಾ ವಿಷಯಗಳ ಕುರಿತು ಜ.1 ರಿಂದ 30 ರವರೆಗೆ ನಡೆಯುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಮೂಲಕ ಎಲ್ಲರಿಗೂ ತಿಳುವಳಿಕೆ ನೀಡುವ ಸಂಬಂಧವಾಗಿ ಶಾಲಾ-ಕಾಲೇಜುಗಳು, ಪೊಲೀಸ್ ಠಾಣೆಗಳು, ಸರ್ಕಾರಿ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ಕಾರ್ಯಕ್ರಮ, ಬೀದಿ ನಾಟಕ ಮತ್ತು ಜಾಥಾ ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಬೇಕು ಎಂದು ಅವರು ತಿಳಿಸಿದ್ದಾರೆ.







