Ballari | ಸರ್ಕಾರಿ ಶಾಲೆ ಉಳಿಸಿ: ಕಂಪ್ಲಿಯಲ್ಲಿ ವಿಶೇಷ ದಾಖಲಾತಿ ಆಂದೋಲನ

ಬಳ್ಳಾರಿ / ಕಂಪ್ಲಿ: ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ನಡೆಸಲಾಯಿತು.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಶಿಕ್ಷಕ ಚಂದ್ರಶೇಖರ್ ಶೆಟ್ರು ಅಭಿಪ್ರಾಯಪಟ್ಟರು.
ಶಾಲೆಯ ವ್ಯಾಪ್ತಿಯ ಕೋಟೆಯ ವಿವಿಧ ವಾರ್ಡ್ ಹಾಗೂ ಓಣಿಗಳಲ್ಲಿ ವಾದ್ಯ ಮೇಳಗಳೊಂದಿಗೆ ಆರಂಭವಾದ ಆಂದೋಲನ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ, ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಈ ವೇಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ ಪೂಜಾರ್, ಸಹ ಶಿಕ್ಷಕಿ ಎಸ್. ಭವ್ಯ ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಿರಾಜುದ್ದೀನ್ ಮನಿಯಾರ್ ದಾಖಲಾತಿ ಆಂದೋಲನದಲ್ಲಿ ಭಾಗವಹಿಸಿದ್ದರು.




