Ballari | ಬರ ಸಂಕಷ್ಟಕ್ಕೆ ಪರಿಣಾಮಕಾರಿ ಕ್ರಮಗಳಿಲ್ಲದಿದ್ದರೆ ವಿಶೇಷ ಅಧಿವೇಶನ ಅರ್ಥಹೀನ: ರೈತ ಸಂಘ

ಸಂಡೂರು/ಬಳ್ಳಾರಿ: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆದಿರುವುದು ಸ್ವಾಗತಾರ್ಹ. ಆದರೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ವಿಶೇಷ ಅಧಿವೇಶನ ಅರ್ಥಹೀನವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ತಿಳಿಸಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮುಖಂಡರು, ಕಳೆದ 140 ವರ್ಷಗಳಲ್ಲೇ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಕೆರೆ-ಕಟ್ಟೆಗಳು ಸೇರಿದಂತೆ ಜಲಮೂಲಗಳು ಬತ್ತಿದ್ದು, ರೈತರು ಬೆಳೆದ ಬೆಳೆಗಳು ಒಣಗಿ ಸಂಪೂರ್ಣ ನಷ್ಟವಾಗಿವೆ. ಅಂತರ್ಜಲ ಮಟ್ಟ ಕುಸಿದಿರುವುದರಿಂದ ತೋಟಗಾರಿಕಾ ಬೆಳೆಗಳೂ ಹಾನಿಗೀಡಾಗಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಎದುರಾಗಿದೆ. ಪರಿಣಾಮವಾಗಿ ಗ್ರಾಮೀಣ ಜನರು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಇಂತಹ ಗಂಭೀರ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಇನ್ನಷ್ಟು ತಾಲೂಕುಗಳನ್ನು ಪಟ್ಟಿಗೆ ಸೇರಿಸುವ ವಿಚಾರದಲ್ಲಿ ವಿಳಂಬ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಗೆ ಸಮರ್ಪಕವಾಗಿ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಸಂಘ ಆರೋಪಿಸಿತು.
ರಾಜ್ಯ ಸರ್ಕಾರ ಹಳೆಯ ಮಾನದಂಡಗಳ ನೆಪ ಹೇಳದೆ ತನ್ನ ಸಂಪನ್ಮೂಲಗಳನ್ನು ಬಳಸಿಕೊಂಡು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ಕೃಷಿ ಸಾಲ ಮನ್ನಾ, ಬ್ಯಾಂಕ್‌ಗಳ ಸಾಲ ವಸೂಲಾತಿಗೆ ತಡೆ, ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ ಏಳು ಗಂಟೆಗಳ ವಿದ್ಯುತ್ ಪೂರೈಕೆ, ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವುದು, ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ, ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವುದು ಸೇರಿದಂತೆ ಹಲವು ಕ್ರಮಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ಖರೀದಿ ಕೇಂದ್ರಗಳಲ್ಲಿ ಖರೀದಿಸಿರುವ ಭತ್ತ, ಜೋಳ ಮತ್ತು ರಾಗಿ ಬೆಳೆಗಳ ಬಾಕಿ ಹಣವನ್ನು ಪಾವತಿಸಬೇಕು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಪೂರೈಕೆಗೆ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲೇ ಉದ್ಯೋಗ ಸೃಷ್ಟಿಸಿ ವಲಸೆ ತಡೆಯುವ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಒತ್ತಾಯಿಸಿತು.
ವಿಶೇಷ ಅಧಿವೇಶನದಲ್ಲಿ ಸರ್ಕಾರ ರೈತ ಸಂಘದ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸೆಪ್ಟೆಂಬರ್ 28ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ, ಮೆರವಣಿಗೆ ಹಾಗೂ ತಾಲೂಕು ಮತ್ತು ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಂಘ ಎಚ್ಚರಿಸಿದೆ.
ಸುದ್ದಿಗೋಷ್ಠಿಯ ಬಳಿಕ ರೈತ ಮುಖಂಡರು ತಹಶೀಲ್ದಾರ್ ಎಂ. ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತರಬೇಕೆಂದು ಮನವಿ ಸಲ್ಲಿಸಿದರು.
ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಎಂ.ಎಲ್.ಕೆ. ನಾಯ್ಡು, ಸಂಡೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮೇಟಿ, ಷಣ್ಮುಖಪ್ಪ, ಪರಮೇಶ್ವರಪ್ಪ, ರಮೇಶ್ ಕೆ.ಬಿ. ಹಾಗೂ ಮೌನೇಶ್ ಉಪಸ್ಥಿತರಿದ್ದರು.






