Ballari | ಮಾದಕ ವ್ಯಸನದಿಂದ ದೂರವಿರಿ : ಬಡಿಗೇರ್ ಜಿಲಾನಸಾಬ್

ಬಳ್ಳಾರಿ/ಕಂಪ್ಲಿ : ಹದಿಹರೆಯದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಬಡಿಗೇರ್ ಜಿಲಾನಸಾಬ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಮಾರುತಿ ನಗರದ ವಲಯದ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಟ್ಕಾ, ಮದ್ಯಪಾನ ಹಾಗೂ ಇತರ ಅಮಲು ಪದಾರ್ಥಗಳ ಸೇವನೆಯು ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲ, ಕುಟುಂಬದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ. ಯಾರಾದರೂ ಮಕ್ಕಳು ವ್ಯಸನಕ್ಕೆ ಒಳಗಾಗಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ದೂರವಿರುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಮಾಲನಬೀ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ ಹಾಗೂ ಕಲಿಕೆಯ ಆಸಕ್ತಿ ಕುಂಠಿತವಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಿಕೊಂಡು, ಮಾದಕ ವಸ್ತು ಮುಕ್ತ ವಿದ್ಯಾರ್ಥಿ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಮಂಜುಳಾ, ಸೇವಾ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






