Ballari | ಬೀದಿ ನಾಯಿಗಳ ದಾಳಿ: ವೃದ್ಧನಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ಬಳ್ಳಾರಿ : ಕಂಪ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪಟ್ಟಣದ ಕುರುಗೋಡು ರಸ್ತೆಯ ಕಲ್ಗುಡಿ ಬಡಾವಣೆಯಲ್ಲಿ ಮಂಗಳವಾರ ಬೆಳಿಗ್ಗೆ ಮನೆಯ ಬಳಿ ನೀರು ಹಿಡಿಯುತ್ತಿದ್ದ ಎರ್ರಿಸ್ವಾಮಿ ಎಂಬ ವಯೋವೃದ್ಧರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಯ ಬಳಿ ನೀರು ಹಿಡಿಯುತ್ತಿದ್ದ ವೇಳೆ ಏಕಾಏಕಿ ಎರ್ರಿಸ್ವಾಮಿ ಅವರ ಮೇಲೆ ನಾಯಿ ದಾಳಿ ನಡೆಸಿದೆ. ಮುಖ, ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ವೃದ್ಧರು ಧೈರ್ಯದಿಂದ ನಾಯಿಯನ್ನು ಎದುರಿಸಿದ್ದು, ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ನಾಯಿಯನ್ನು ಸಾಯಿಸಿ ತಮ್ಮನ್ನು ರಕ್ಷಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಎರ್ರಿಸ್ವಾಮಿ ಅವರನ್ನು 108 ಆಂಬುಲೆನ್ಸ್ ಮೂಲಕ ಗಂಗಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಗಾಯಾಳುವಿನ ಮುಖ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಆಳವಾದ ಗಾಯಗಳಾಗಿದ್ದು, ಅಗತ್ಯ ಚಿಕಿತ್ಸೆ ಮತ್ತು ಆಂಟಿ-ರೇಬಿಸ್ ಲಸಿಕೆ ನೀಡಲಾಗಿದೆ.
ಇತ್ತ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಪುರಸಭೆ ಮುಖ್ಯಾಧಿಕಾರಿಗಳು, ಬೀದಿ ನಾಯಿಗಳ ಸಮಸ್ಯೆ ಗಮನಕ್ಕೆ ಬಂದಿದ್ದು, ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಾಯಿ ಹಿಡಿಯುವ ನುರಿತ ತಂಡದ ಮೂಲಕ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡುವುದು ಸೇರಿದಂತೆ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ :
ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಯ ಘಟನೆಗಳು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದು, ಅಧಿಕಾರಿಗಳು ಕೇವಲ ಭರವಸೆ ನೀಡದೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ಮಾಜಿ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಜನರಿಗೆ, ವಿಶೇಷವಾಗಿ ವಯೋವೃದ್ಧರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.






