ಬಳ್ಳಾರಿ | ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಡಿಐಜಿ ಡಾ.ಪಿ.ಎಸ್.ಹರ್ಷ

ಬಳ್ಳಾರಿ, ಜ. 16: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಪಿ.ಎಸ್.ಹರ್ಷ ಅವರು ಬುಧವಾರ ತಡರಾತ್ರಿ ಸ್ವತಃ ಗಸ್ತು ನಡೆಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ನಗರದ ವಿವಿಧ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ಕಟ್ಟುನಿಟ್ಟಿನ ನಿಗಾ ಮತ್ತು ತಪಾಸಣೆ :
ಚೆಕ್ ಪೋಸ್ಟ್ ಸ್ಥಾಪನೆ : ಜಿಲ್ಲೆಯ ಗಡಿಭಾಗಗಳಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಂದ ಬರುವ ವಾಹನಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿರಂತರ ನಿಗಾ ಇಡಲು ಸೂಚಿಸಲಾಗಿದೆ.
ಲಾಡ್ಜ್‌ಗಳ ತಪಾಸಣೆ : ನಗರದಾದ್ಯಂತ ಇರುವ ಲಾಡ್ಜ್‌ಗಳು ಹಾಗೂ ವಸತಿ ನಿಲಯಗಳಲ್ಲಿ ಪೊಲೀಸ್ ಅಧಿಕಾರಿಗಳು ಆಕಸ್ಮಿಕ ದಾಳಿ ನಡೆಸಿ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ.
ಸಿಬ್ಬಂದಿ ನಿಯೋಜನೆ : ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ. ವಿಶೇಷವಾಗಿ ಬಳ್ಳಾರಿ ನಗರವನ್ನು ವಿವಿಧ ವಲಯಗಳನ್ನಾಗಿ ವಿಂಗಡಿಸಿ ಪಾಳಿಯಂತೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅಥವಾ ಶಾಂತಿ ಭಂಗ ಉಂಟುಮಾಡುವ ಪ್ರಯತ್ನಗಳಿಗೆ ಅವಕಾಶ ನೀಡದಂತೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ಅಥವಾ ಸಮಾಜದ ನೆಮ್ಮದಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಐಜಿ ಅವರು ಇದೇ ವೇಳೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.







