Ballari | ಬಸ್ ವಿಳಂಬ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಕೆಲಕಾಲ ಬಸ್ ತಡೆದು ಆಕ್ರೋಶ

ಸಂಡೂರು/ಬಳ್ಳಾರಿ, ಆ.3: ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರೇನಹಳ್ಳಿ–ಹುಲಿಕುಂಟೆ ಮಾರ್ಗದಲ್ಲಿ ಸಂಚರಿಸುವ ಬಸ್ ನಿಗದಿತ ಸಮಯಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಟನಿಕಂಬ ಗ್ರಾಮದ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್ ವಿಳಂಬದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಟನಿಕಂಬ ಗ್ರಾಮದ ಬಸ್ ನಿಲ್ದಾಣದಲ್ಲಿ ಕೆಲಕಾಲ ಬಸ್ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಮಾರ್ಗದಲ್ಲಿ ಕೆಲ ಸಮಯ ಸಂಚಾರ ಅಸ್ತವ್ಯಸ್ತಗೊಂಡಿತು. ಬಸ್ ಸೇವೆಯನ್ನು ನಿಗದಿತ ವೇಳಾಪಟ್ಟಿಯಂತೆ ನಿಯಮಿತವಾಗಿ ನಡೆಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮದ ಹಿರಿಯರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ನಂತರ ಬಸ್ ಸಂಚಾರ ಪುನರಾರಂಭವಾಯಿತು.
ಗಿರೇನಹಳ್ಳಿ, ಹುಲಿಕುಂಟೆ ಹಾಗೂ ಕಾಟನಿಕಂಬ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ ಬಸ್‌ಗಳನ್ನು ನಿಗದಿತ ವೇಳಾಪಟ್ಟಿಯಂತೆ ಸಂಚರಿಸುವಂತೆ ಸಾರಿಗೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.






