Ballari | ಸಂಡೂರಿನಲ್ಲಿ ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲು : ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ | PC : magnific
ಸಂಡೂರು/ಬಳ್ಳಾರಿ : ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿರುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಚೋರನೂರು ಪೊಲೀಸ್ ಠಾಣೆ ವ್ಯಾಪ್ತಿಯ ಚೋರನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅದೇ ಗ್ರಾಮದ ಅನಿಲ್ ಕುಮಾರ್ ಎಂಬ ಯುವಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಚೋರನೂರು ಠಾಣೆ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಹೊನ್ನೂರುಸ್ವಾಮಿ ಎಂಬಾತ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಮೂರನೇ ಘಟನೆ ಸಂಡೂರು ತಾಲೂಕಿನ ಯಶವಂತನಗರ ಗ್ರಾಮದಲ್ಲಿ ನಡೆದಿದ್ದು, ಅನಂತಕುಮಾರ್ ಎಂಬಾತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯ ಜೊತೆಗೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.






