Ballari | ಶಶೀಲ್ ನಮೋಶಿ ಗೆಲುವು: ಸಂಡೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಸಂಡೂರು/ಬಳ್ಳಾರಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಎನ್‌ಡಿಎ ಅಭ್ಯರ್ಥಿ ಶಶೀಲ್ ನಮೋಶಿ ಅವರಿಗೆ ಸಂಡೂರು ಮಂಡಲ ಭಾರತೀಯ ಜನತಾ ಪಕ್ಷದ ವತಿಯಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಶಶಿಲ್ ಜಿ. ನಮೋಶಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಚುನಾವಣೆಯಲ್ಲಿ ಒಟ್ಟು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಡೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಈ ಗೆಲುವು ಪಕ್ಷದ ಕಾರ್ಯಕರ್ತರ ಪರಿಶ್ರಮ, ಸಂಘಟನಾತ್ಮಕ ಒಗ್ಗಟ್ಟು ಹಾಗೂ ಶಿಕ್ಷಕ ಸಮುದಾಯದ ವಿಶ್ವಾಸಕ್ಕೆ ಸಂದ ಜಯವಾಗಿದೆ ಎಂದು ಮುಖಂಡರು ಹರ್ಷ ವ್ಯಕ್ತಪಡಿಸಿದರು.
ಶಶಿಲ್ ಜಿ. ನಮೋಶಿ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ. ಅವರು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಲಿ ಹಾಗೂ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನಗಳು ಲಭಿಸಲಿ ಎಂದು ಪಕ್ಷದ ಮುಖಂಡರು ಶುಭ ಹಾರೈಸಿದರು.
ಎನ್‌ಡಿಎ ಮೈತ್ರಿಕೂಟ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಡೂರು ಮಂಡಲ ಬಿಜೆಪಿ ಅಧ್ಯಕ್ಷ ಬಿ. ಅಶೋಕ್ ಕುಮಾರ್, ಮಾಜಿ ವಾಡ ಅಧ್ಯಕ್ಷ ಎರಿಸ್ವಾಮಿ, ವಸಂತ್ ಕುಮಾರ್, ಸುಬ್ಬಯ್ಯ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ವಿಜಯೋತ್ಸವದಲ್ಲಿ ಪಾಲ್ಗೊಂಡರು.






