Ballari | ನೀಟ್ ಪೇಪರ್ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಸಂಡೂರು/ಬಳ್ಳಾರಿ : ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿರುವ ನೀಟ್ ಪೇಪರ್ ಸೋರಿಕೆ ಪ್ರಕರಣವನ್ನು ಖಂಡಿಸಿ ಭಾರತೀಯ ಯುವ ಕಾಂಗ್ರೆಸ್ (IYC) ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ವತಿಯಿಂದ ಸಂಡೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ವಿಜಯ ಸರ್ಕಲ್‌ನಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.
“ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸು ಭಗ್ನವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ತಾಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನೀಟ್ ಪರೀಕ್ಷೆಯ ಪಾರದರ್ಶಕತೆ ಕಾಪಾಡಿ, ಪೇಪರ್ ಲೀಕ್ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎನ್‌ಕೆಎಸ್ ಮಂಜುನಾಥ್, ಅಸೆಂಬ್ಲಿ ಅಧ್ಯಕ್ಷ ಬಸವರಾಜ್ ಬ್ರೂಸ್ಲಿ, ಸಂಡೂರು ಬ್ಲಾಕ್ ಅಧ್ಯಕ್ಷ ರುದ್ರಗೌಡ, ತೋರಣಗಲ್ಲು ಬ್ಲಾಕ್ ಅಧ್ಯಕ್ಷ ಮದರ್ ಭಾಷಾ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಆಸೀಫ್ ದೊಡ್ಡಮನೆ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ನೂರಾರು ಯುವಕರು ಭಾಗವಹಿಸಿದ್ದರು.






