ಬಳ್ಳಾರಿ | ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಅದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಗಂಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಸಹಭಾಗೀದಾರರ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಕಾವಲು ಸಮಿತಿಯ ಸದಸ್ಯರಿಗೆ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಅವರು ಮಾತನಾಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಕೀಲರಾದ ತ್ರಿವೇಣಿ ಪತ್ತಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಾಗಾರ ಆರಂಭಕ್ಕೂ ಮುನ್ನ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತ.ಸಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹನುಮಂತಪ್ಪ, ಬಳ್ಳಾರಿ (ನಗರ) ಹಾಗೂ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನ್ ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.







