ಬಳ್ಳಾರಿ ಗುಂಪು ಘರ್ಷಣೆ: ಶಾಸಕ ಭರತ್ ರೆಡ್ಡಿ ಸಹಿತ 40ಕ್ಕೂ ಅಧಿಕ ಮಂದಿಯ ವಿರುದ್ಧ FIR

ನಾರಾ ಭರತ್ ರೆಡ್ಡಿ
ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ಗುರುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಅವರ ಆಪ್ತ ಸತೀಶ್ ರೆಡ್ಡಿ ಸಹಿತ 40ಕ್ಕೂ ಅಧಿಕ ಮಂದಿಯ ವಿರುದ್ಧ FIR ದಾಖಲಾಗಿದೆ.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಿಜೆಪಿ ಸ್ಥಳೀಯ ಮುಖಂಡ ನಾಗರಾಜ್ ಎಂಬವರು ನೀಡಿದ ದೂರಿನಂತೆ ಈ ಪ್ರಕರಣ ದಾಖಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣ ರೆಡ್ಡಿ ಸಹಿತ ಹಲವರ ಹೆಸರನ್ನು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ ಜನಾರ್ದನ ರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಶುಕ್ರವಾರ ರಾತ್ರಿ ದೂರು ನೀಡಿದ್ದರೆ, ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಮುಖಂಡ ನಾಗರಾಜ್ ದೂರು ನೀಡಿದ್ದಾರೆ.
ಹವಂಬಾವಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿತ್ತು.
ನಗರ ಶಾಸಕ ನಾರಾ ಭರತ್ ರೆಡ್ಡಿಯವರ ಆಪ್ತ ಚಾನಾಳ್ ಶೇಖರ್ ನೀಡಿದ ದೂರನ್ನು ಆಧರಿಸಿ ಪೊಲೀಸರು ಈ FIR ದಾಖಲಿಸಿದ್ದರು.







