ಬಳ್ಳಾರಿ | ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಸೌಲಭ್ಯ ಕುರಿತು ಅರಿವು ಮೂಡಿಸಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಜಿಲ್ಲೆಯಲ್ಲಿನ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೌಲಭ್ಯಗಳನ್ನು ಸಮುದಾಯ ಮಟ್ಟದವರೆಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಉತ್ತಮ ತರಬೇತಿ ಹೊಂದಿ, ಅವುಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಸೋಮವಾರದಂದು, ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಆರೋಗ್ಯ ಕಾರ್ಯಕರ್ತರಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ತಂಬಾಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ತಂಬಾಕು ಸೇವನೆಗೆ ಒಳಗಾಗಿರುವ ಜನರಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರ, ಅದರಲ್ಲಿ ಸಿಗುವ ಆಪ್ತಸಮಾಲೋಚನೆ, ಉಚಿತ ಎನ್‌ಆರ್‌ಟಿ ಚಿಕಿತ್ಸೆ ಸೌಲಭ್ಯಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಭಾಗೀಯ ಸಂಯೋಜಕ ಮಹಾಂತೇಶ್ ಬಿ.ಉಳ್ಳಾಗಡಿ ಹಾಗೂ ಬೆಂಗಳೂರಿನ ತಂಬಾಕು ವ್ಯಸನ ಮುಕ್ತ ಕೇಂದ್ರ ರಾಜ್ಯ ಘಟಕದ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಶ್ ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ್, ಹೆಚ್‌ಐಓ ಗೋವಿಂದಪ್ಪ, ಡಾ.ಜಬೀನ್ ತಾಜ್, ಪ್ರಶಾಂತ್ ಕುಮಾರ್, ಮಲ್ಲೇಶಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.







