ಬಳ್ಳಾರಿ | ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಅನುದಾನದ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಶೇ.100ರಷ್ಟು ಸಾಧನೆ ಮಾಡಬೇಕು. ಈ ದಿಸೆಯಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013ರನ್ವಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ 2024-25ನೇ ಸಾಲಿನ ಮಾರ್ಚ್-2025 ಮತ್ತು ಜೂನ್-2025 ಅಂತ್ಯದವರೆಗಿನ ಪ್ರಗತಿಯ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆಯಾ ಉದ್ದೇಶಗಳಿಗೆ ಮಾತ್ರವೇ ಬಳಕೆ ಮಾಡಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







