ಬಳ್ಳಾರಿ | ಚೋರನೂರಿನಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಹಾಹಾಕಾರ; ಪಿಡಿಒ ವಿರುದ್ಧ ಅಸಮಾಧಾನ

ಸಂಡೂರು: ನಿಗದಿತ ವೇಳೆಗೆ ಕುಡಿಯುವ ನೀರು ಪೂರೈಕೆಯಾಗದೆ ದಿನನಿತ್ಯದ ಅಗತ್ಯಗಳಿಗೂ ಪರದಾಡುವಂತಾಗಿದೆ ಎಂದು ಆರೋಪಿಸಿ ತಾಲೂಕಿನ ಚೋರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಬುಧವಾರ ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಹಿಳೆಯರು ಹಾಗೂ ಪುರುಷರು ಖಾಲಿ ಕೊಡಗಳನ್ನು ಹಿಡಿದು ಗ್ರಾಪಂ ಕಚೇರಿಗೆ ಆಗಮಿಸಿ, ಸಮರ್ಪಕ ಹಾಗೂ ನಿಯಮಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿದರು. ಹಲವು ದಿನಗಳಿಂದ ನೀರಿಗಾಗಿ ಜನರು ಪರದಾಡುತ್ತಿದ್ದರೂ ಸಮಸ್ಯೆ ಪರಿಹಾರಕ್ಕೆ ಪಂಚಾಯಿತಿ ಆಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಿಗದಿತ ಸಮಯಕ್ಕೆ ನೀರು ಬಾರದ ಪರಿಣಾಮ ಮನೆ ಬಳಕೆಯ ನೀರಿಗೂ ತೀವ್ರ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿಗಾಗಿ ಪ್ರತಿದಿನ ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಹಾಗೂ ವೃದ್ಧರು ಹೆಚ್ಚಿನ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು.
ನೀರಿನ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಜನರ ಮೂಲಭೂತ ಅಗತ್ಯವಾಗಿರುವ ಕುಡಿಯುವ ನೀರಿನ ವಿಚಾರದಲ್ಲೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧವೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
‘ನೀರಿಗಾಗಿ ಖಾಲಿ ಕೊಡ ಹಿಡಿದು ಕಚೇರಿಗೆ ಬರುವ ಪರಿಸ್ಥಿತಿ ಬಂದಿರುವುದು ಅಧಿಕಾರಿಗಳ ವೈಫಲ್ಯಕ್ಕೆ ಸಾಕ್ಷಿ’ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಕೂಡಲೇ ನೀರು ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಿ ನಿಗದಿತ ವೇಳಾಪಟ್ಟಿಯಂತೆ ನಿಯಮಿತವಾಗಿ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ಮರುಕಳಿಸದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.






