ಬಳ್ಳಾರಿ: ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

ಬಳ್ಳಾರಿ: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ (97) ಶುಕ್ರವಾರ ಮುಂಜಾನೆ ನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಶನಿವಾರ, ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ವಕೀಲರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಎನ್. ತಿಪ್ಪಣ್ಣ, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಅವರು, ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಎನ್. ತಿಪ್ಪಣ್ಣ, ಬಳಿಕ ಜೆಡಿಯು ಸೇರಿದ್ದರು. ಆ ಪಕ್ಷವನ್ನು ಜೆಡಿಎಸ್ ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.





