ಬಳ್ಳಾರಿ |ಮಕ್ಕಳ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸಿ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ : ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ “ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅನುಷ್ಠಾನ” ಕುರಿತು ಸರ್ಕಾರಿ/ಸರ್ಕಾರೇತರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಬುಧವಾರ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ನಿಷೇಧಾಧಿಕಾರಿಗಳಾಗಿ ನಿಯೋಜನೆಗೊಂಡಿರುವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ವ್ಯಾಪ್ತಿಯಲ್ಲಿ ಇಲಾಖೆಗಳೊಂದಿಗೆ ಸಕ್ರಿಯವಾಗಿ ಭಾಗವಹಿಸಿ ಬಾಲ್ಯವಿವಾಹ ತಡೆಯಲು ಕ್ರಮವಹಿಸಬೇಕು. ಈ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕೆ ಮುಂದಾಗಬೇಕು ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಅಗತ್ಯತೆ ಕುರಿತು ಹಾಗೂ ವಿವಿಧ ರೀತಿಯ ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ, ದತ್ತು ಪ್ರಕ್ರಿಯೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಕುಲಕರ್ಣಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯುವಲ್ಲಿ ಪ್ರಾಂಶುಪಾಲರ ಪಾತ್ರವು ಇದ್ದು, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಪೊಲೀಸ್ ತುರ್ತು ಸಹಾಯವಾಣಿ 112ಗೆ ಕರೆ ಮಾಡಲು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಾಗಲಿಂಗಸ್ವಾಮಿ ಅವರು ಮಾತನಾಡಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಡಾ.ಹೆಚ್.ಸಿ.ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಅನುಷ್ಠಾನ ಕುರಿತು ಸವಿವರ ಮಾಹಿತಿ ಮಂಡಿಸಿದರು.
ಕಾರ್ಯಾಗಾರದಲ್ಲಿ ಬಳ್ಳಾರಿ ತಾಪಂ ಇಒ ಡಾ.ಶ್ರೀಧರ್ ಐ ಬಾರಿಕರ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಂಜುನಾಥ, ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ನಂದಿನಿ ಶಿಂಧೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಚನ್ನಬಸಪ್ಪ, ಮಂಜುನಾಥ, ರವಿ, ಸುಧಾ, ನಿಲೋಫಿಯಾ, ಮಕ್ಕಳ ಸಹಾಯವಾಣಿ ಸಂಯೋಜಕರಾದ ಆನಂದ ಮತ್ತು 60ಕ್ಕೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.







