ಜೂ.1ರಿಂದ ಬಳ್ಳಾರಿಯಲ್ಲಿ ಹೆಲ್ಮೆಟ್ ಕಡ್ಡಾಯ

ಬಳ್ಳಾರಿ: ರಸ್ತೆ ಅಪಘಾತಗಳನ್ನು ತಡೆಯುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ ಬಳ್ಳಾರಿ ನಗರದಲ್ಲಿ ಜೂ.1ರಿಂದ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ಸೆಕರ್ ತಿಳಿಸಿದ್ದಾರೆ.
ಭಾರತೀಯ ಮೋಟಾರು ವಾಹನ ಕಾಯ್ದೆ-1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳ ಪ್ರಕಾರ ದ್ವಿಚಕ್ರ ವಾಹನ ಚಾಲಕರು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ತ್ರಿಬಲ್ ರೈಡಿಂಗ್, ಡ್ರಿಂಕ್ ಅಂಡ್ ಡ್ರೈವ್ ಹಾಗೂ ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವವರ ಮೇಲೂ ವಿಶೇಷ ನಿಗಾ ಇಟ್ಟು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಧ್ವನಿವರ್ಧಕಗಳ ಮೂಲಕ ಮಾಹಿತಿ ಪ್ರಸಾರ, ಕರಪತ್ರ ವಿತರಣೆ, ಬೀದಿ ನಾಟಕ, ಬೈಕ್ ರ್ಯಾಲಿ, ಜಾಗೃತಿ ವಾಹನಗಳಲ್ಲಿ ವಿಡಿಯೋ ಪ್ರದರ್ಶನ ಹಾಗೂ ಸಾಂಕೇತಿಕವಾಗಿ ಹೆಲ್ಮೆಟ್ ವಿತರಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ ಪರಿಣಾಮ 1009 ಅಪಘಾತ ಪ್ರಕರಣಗಳು ದಾಖಲಾಗಿದ್ದು, 462 ಮಂದಿ ಮೃತಪಟ್ಟಿದ್ದಾರೆ ಹಾಗೂ 1,072 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
“ಜೀವ ಅಮೂಲ್ಯ. ದ್ವಿಚಕ್ರ ವಾಹನ ಸವಾರರು ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು” ಎಂದು ಎಸ್‌ಪಿ ಡಾ. ಸುಮನ್ ಡಿ. ಪೆನ್ಸೆಕರ್ ಮನವಿ ಮಾಡಿದ್ದಾರೆ.






