ವಸತಿ ರಹಿತ, ನಿವೇಶನ ರಹಿತ ಅರ್ಹರಿಗೆ ʼಗುಡ್ನ್ಯೂಸ್ʼ: ಸೆ.30ರವರೆಗೆ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಮಡಗಿನ ಬಸಪ್ಪ
ಸಂಡೂರು/ಬಳ್ಳಾರಿ: 2018ರ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷಾ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳನ್ನು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30, 2026ರವರೆಗೆ ವಿಸ್ತರಿಸಲಾಗಿದೆ.
2018ರ ಸಮೀಕ್ಷಾ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಸತಿ ಸೌಲಭ್ಯದಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಂಡೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಸೂಚಿಸಿದ್ದಾರೆ.
ಸರ್ಕಾರದ “ಪ್ರತಿಯೊಬ್ಬರಿಗೂ ಸೂರು” ಎಂಬ ಆಶಯದಡಿ ಅರ್ಹ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಅವಕಾಶ ನೀಡಲಾಗಿದೆ. ಅರ್ಹ ಫಲಾನುಭವಿಗಳು ಯಾವುದೇ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ತಮ್ಮ ಹೆಸರು ನೋಂದಾಯಿಸಿಕೊಂಡು ಸರ್ಕಾರದ ವಸತಿ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಇತ್ತೀಚಿನ ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್ಬುಕ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು.
ಅಂತಿಮ ದಿನಾಂಕ: ಸೆಪ್ಟೆಂಬರ್ 30, 2026
2018ರ ಸಮೀಕ್ಷಾ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಪ್ರಕಟಣೆ ತಿಳಿಸಿದೆ.






