ಕಂಪ್ಲಿಯಲ್ಲಿ ರಸ್ತೆ ಗುಂಡಿಗಳ ಕಾಟ: ಅಪಘಾತ ಭೀತಿ, ಪುರಸಭೆ ನಿರ್ಲಕ್ಷ್ಯ ಆರೋಪ

ಕಂಪ್ಲಿ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣಗೊಂಡಿದ್ದು, ಇದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಆದರೆ ಪುರಸಭೆ ಅಧಿಕಾರಿಗಳು ಈ ಸಮಸ್ಯೆಯನ್ನು ನಿರ್ಲಕ್ಷಿಸುತ್ತಿರುವಂತೆ ಕಂಡುಬರುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ವಾಲ್ಮೀಕಿ ವೃತ್ತದ ಎಂಡಿ ಕ್ಯಾಂಪ್ ಎದುರಿನ ರಸ್ತೆ, ಭಾರತ್ ಗ್ಯಾಸ್ ಕಚೇರಿ ಎದುರು ಹಾಗೂ ಕಾಳಿಕಾದೇವಿ ದೇವಸ್ಥಾನದ ಸಮೀಪದ ರಸ್ತೆಗಳಲ್ಲಿನ ಗುಂಡಿಗಳು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆ ಉಂಟು ಮಾಡುತ್ತಿವೆ. ದಿನದಿಂದ ದಿನಕ್ಕೆ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತಿದ್ದು, ಅಪಘಾತಗಳ ಭೀತಿ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಕಾಳಿಕಾದೇವಿ ದೇವಸ್ಥಾನದ ಬಳಿಯ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇಲ್ಲಿ ಪ್ರತಿದಿನ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಪುರಸಭೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರಸ್ತೆಗಳ ಮೇಲೆ ಪ್ರತಿದಿನ ಭಾರೀ ವಾಹನಗಳ ಸಂಚಾರ ನಡೆಯುತ್ತಿರುವುದರಿಂದ ಗುಂಡಿಗಳ ಗಾತ್ರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಎದುರಾಗುವಂತಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರದ ದೃಷ್ಟಿಯಿಂದ ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.







