Kampli | ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಬದಲಾವಣೆಗೆ ಕೈಜೋಡಿಸಿ: ಶಾಸಕ ಜೆ.ಎನ್.ಗಣೇಶ್
ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಕಂಪ್ಲಿ: ನವದಂಪತಿಗಳು ಹಿರಿಯರನ್ನು ಗೌರವಿಸುವುದರ ಜೊತೆಗೆ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಬದಲಾವಣೆಗೆ ಕೈಜೋಡಿಸಬೇಕು ಎಂದು ಶಾಸಕ ಜೆ.ಎನ್.ಗಣೇಶ್ ಸಲಹೆ ನೀಡಿದರು.
ತಾಲ್ಲೂಕಿನ ಬೆಳಗೋಡ್‌ಹಾಳ್ ಗ್ರಾಮದ ಕೆಂಚಮ್ಮ ದೇವಸ್ಥಾನದ ಆವರಣದಲ್ಲಿ ಜೆ.ಎನ್. ಗಣೇಶ್ ಫೌಂಡೇಶನ್ ಹಾಗೂ ಯುವ ಮುಖಂಡ ದೊಡ್ಡ ಬಸವರಾಜ ಬಡಗಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಡು ಬಡತನವನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ತಮ್ಮ ಫೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನಿರಂತರವಾಗಿ ಆರ್ಥಿಕ ನೆರವು ನೀಡಲಾಗುವುದು. ಪ್ರತಿಯೊಬ್ಬರೂ ತಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ಸಮಾಜಮುಖಿ ಕೆಲಸಗಳಿಗೆ ಮೀಸಲಿಡಬೇಕು ಎಂದು ಹೇಳಿದರು.
ಯುವ ಮುಖಂಡ ದೊಡ್ಡ ಬಸವರಾಜ ಬಡಗಿ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಸಕರು ಗ್ರಾಮದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಎಮ್ಮಿಗನೂರು ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್, ದಿಶಾ ಸಮಿತಿ ಸದಸ್ಯ ಎ.ಸಿ. ದಾನಪ್ಪ, ಪಿಡಿಒ ಶಿಲ್ಪರಾಣಿ, ಮುಖಂಡರಾದ ಬಿ. ಸಿದ್ದಪ್ಪ, ಜಿ. ರಾಮಣ್ಣ, ಚನ್ನಬಸವರಾಜ, ಡಿಶ್ ಪ್ರಸಾದ್, ಸುಧಾಕರ, ನೆಣಕಿ ಗಿರೀಶ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.






