ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ. ಮಲ್ಲಿಕಾರ್ಜುನ ಆಯ್ಕೆ

ಬಳ್ಳಾರಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಕುರುಬ ಸಮುದಾಯದ ಕೆ.ಮಲ್ಲಿಕಾರ್ಜುನ ಅವರನ್ನು ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮಲ್ಲಿಕಾರ್ಜುನ ಅವರು ಈ ಹಿಂದೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಳಿಕ ಸುಮಾರು 12 ವರ್ಷಗಳ ಕಾಲ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಶ್ರಮಿಸಿದ್ದಾರೆ.
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಅವರ ನೇಮಕದಿಂದ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಬಲ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಮಲ್ಲಿಕಾರ್ಜುನ ಅವರಿಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.




