ನ.15ರಂದು ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

ಬಳ್ಳಾರಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯು ಬಳ್ಳಾರಿ ನಗರದ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15 ರಂದು ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ- ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು.
ಈ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 12,004 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನ.14 ರಂದು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ನಗರದ ಜಿಲ್ಲಾ ಕ್ರೀಡಾಂಗಣದ ಬಳಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಹಾಗೂ ಪುರುಷ ಅಭ್ಯರ್ಥಿಗಳಿಗೆ ನಗರದ ರಂಗಮಂದಿರ ರಸ್ತೆಯ ಬಾಬು ಜಗಜೀವನ್ ರಾಮ್ ಭವನದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ರೀತಿಯಾಗಿ ಕೆಕೆಆರ್ ಟಿಸಿ ವತಿಯಿಂದ ವಿವಿಧ ಸ್ಥಳಗಳಿಂದ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ತಲುಪಲು ಕಾಲಕಾಲಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಫ್ರಿಸ್ಕಿಂಗ್, ಫೇಸ್ ರೆಕಾಗ್ನಿಷನ್ ಮತ್ತು ಜಾಮರ್ ಗಳಂತಹ ಅತ್ಯಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ 24/7 ಸಿಸಿಟಿವಿ ಅಳವಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಜಿಪಂ ಕಚೇರಿಯಲ್ಲಿರುವ ಎನ್‌ಐಸಿ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಪ್ರತಿ ಕೇಂದ್ರಕ್ಕೆ ನಾಲ್ವರು ನೋಡಲ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಶ್ರವಣ ಅಥವಾ ಇತರೆ ಆರೋಗ್ಯ ಸಮಸ್ಯೆ ಇರುವ ಅಭ್ಯರ್ಥಿಗಳಿಗಾಗಿ ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆ ಕೂಡ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಎರಡು ಗಂಟೆ ಮುಂಚಿತವಾಗಿ ಹಾಜರಾಗಬೇಕು. ತಮ್ಮ ಪ್ರವೇಶ ಪತ್ರ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿ (ಆಧಾರ್ ಕಾರ್ಡ್ / ಚುನಾವಣಾ ಗುರುತಿನ ಚೀಟಿ) ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದನ್ನು ತಡೆಯಲು ಜಿಲ್ಲೆಯಾದ್ಯಂತ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಂದ ನಿಗಾ ಇರಿಸಲಾಗಿದ್ದು, ತಪ್ಪು ಸಂದೇಶ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು. ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗಾಗಿ 13 ಜನ ಇನ್ಸ್ ಪೆಕ್ಟರ್ ಗಳು, 20 ಪಿಎಸ್‌ಐಗಳು, 250 ಹೆಚ್‌ಸಿ/ಪಿಸಿ ಸಿಬ್ಬಂದಿ ಹಾಗೂ 150 ಹೋಮ್ ಗಾರ್ಡ್ ಗಳನ್ನು ನೇಮಿಸಲಾಗಿದೆ. ಮೇಲ್ವಿಚಾರಣೆಗಾಗಿ ಇಬ್ಬರು ಡಿವೈಎಸ್‌ಪಿಗಳನ್ನು ನಿಯೋಜಿಸಲಾಗಿದ್ದು, ಖುದ್ದು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್ ಇದ್ದರು.






