ಬರ ಅಧ್ಯಯನಕ್ಕೆ ಸಚಿವ ಬಿ.ನಾಗೇಂದ್ರ ಹೊಲಗಳಿಗೆ ಭೇಟಿ; ರೈತರಿಗೆ ವಿಮೆ ಪರಿಹಾರದ ಭರವಸೆ

ಸಿರುಗುಪ್ಪ : ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶುಕ್ರವಾರ ಸಿದ್ದರಾಂಪುರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.
ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಕುರಿತು ಮಾಹಿತಿ ಪಡೆದ ಸಚಿವರು, ಪರಿಸ್ಥಿತಿಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ಸಿದ್ದರಾಂಪುರ ಗ್ರಾಮದ ರೈತ ಮಹಿಳೆ ರಾಜೇಶ್ವರಮ್ಮ ಅವರ ಮೂರು ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಸಜ್ಜೆ ಬೆಳೆ ಸಂಪೂರ್ಣ ಒಣಗಿರುವುದನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮು ವಿಫಲವಾಗುವ ಆತಂಕವಿದೆ. ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಶೇ.25ಕ್ಕಿಂತ ಕಡಿಮೆ ಬಿತ್ತನೆಯಾಗಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಬಿತ್ತನೆ ನಿಯಮದಡಿ ರೈತರಿಗೆ ವಿಮಾ ರಕ್ಷಣೆ ದೊರೆಯಲಿದೆ. ಬೆಳೆ ವಿಮೆ ಮಾಡಿಸಿರುವ ಹಾಗೂ ಮಳೆ ಕೊರತೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರಿಗೆ ಶೇ.25ರಷ್ಟು ವಿಮಾ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಾಲುವೆಗಳಿಗೆ ನೀರು ಹರಿಸಲು ಕ್ರಮ :
ತುಂಗಭದ್ರಾ ಜಲಾಶಯದಲ್ಲಿ ಸುಮಾರು 80 ಟಿಎಂಸಿ ನೀರು ಸಂಗ್ರಹವಾಗುವ ನಿರೀಕ್ಷೆಯಿದ್ದು, ಬೆಳೆಗಳಿಗೆ ಅನುಕೂಲವಾಗುವಂತೆ ಕಾಲುವೆಗಳಿಗೆ ಶೀಘ್ರ ನೀರು ಹರಿಸುವ ಕುರಿತು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಶಾಸಕ ಬಿ.ಎಂ. ನಾಗರಾಜ ಮಾತನಾಡಿದರು. ವಿವಿಧ ರೈತ ಸಂಘಟನೆಗಳು ಹಾಗೂ ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಟಿ.ಎಂ. ಚಂದ್ರಶೇಖರಯ್ಯ ಸ್ವಾಮಿ, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ನಾಗರುದ್ರಗೌಡ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಸೋಮಸುಂದರಂ, ಜಿಲ್ಲಾ ಕೃಷಿ ಉಪ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಹಿರಿಯ ಉಪ ನಿರ್ದೇಶಕ ಶಶಿಕಾಂತ್, ತಹಶೀಲ್ದಾರ್ ಗೌಸಿಯಾ ಬೇಗಂ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






