ಬಳ್ಳಾರಿಯಲ್ಲಿ ಶಾಂತಿಯುತವಾಗಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ

ಬಳ್ಳಾರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ಬಳ್ಳಾರಿ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆ ಶಾಂತಿಯುತವಾಗಿ ನಡೆಯಿತು.
ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಿಕ್ಕುಳಿದ ವೃಂದ (Residual Cadre) ಹುದ್ದೆಗಳಿಗೆ ಹಾಗೂ ಸಂಜೆ 4ರಿಂದ 5.30 ಗಂಟೆಯವರೆಗೆ ಸ್ಥಳೀಯ ವೃಂದ (Local Cadre) ಹುದ್ದೆಗಳಿಗೆ ಪರೀಕ್ಷೆ ನಡೆಸಲಾಯಿತು.
ಪರೀಕ್ಷೆಗೆ ಒಟ್ಟು 15,804 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಬಳ್ಳಾರಿ ನಗರದ 18 ಪರೀಕ್ಷಾ ಕೇಂದ್ರಗಳಲ್ಲಿ 11,768 ಅಭ್ಯರ್ಥಿಗಳು ಹಾಗೂ ಸಂಡೂರು ತಾಲೂಕಿನ 7 ಪರೀಕ್ಷಾ ಕೇಂದ್ರಗಳಲ್ಲಿ 4,036 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಬೆಳಿಗ್ಗೆ 8 ಗಂಟೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಆರಂಭಿಸಿದರು. ನಗರದ ಸರಳಾದೇವಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಎದುರು ಅಭ್ಯರ್ಥಿಗಳು ಸರತಿ ಸಾಲಿನಲ್ಲಿ ನಿಂತು ತಪಾಸಣೆಯ ಬಳಿಕ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಗತ್ಯ ಭದ್ರತಾ ಕ್ರಮಗಳೊಂದಿಗೆ ಯಾವುದೇ ಅಹಿತಕರ ಘಟನೆ ನಡೆಯದೆ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ನಡೆದವು.




