ಗ್ರಾಮೀಣ ಪ್ರದೇಶಗಳ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸಲು ಗ್ರಾಮೀಣ ಬ್ಯಾಂಕುಗಳು ಪ್ರಮುಖ ಪಾತ್ರವಹಿಸಬೇಕಿದೆ : ನಿರ್ಮಲಾ ಸೀತಾರಾಮನ್

ಬಳ್ಳಾರಿ : ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ ವಿವಿಧ ಸಾಲ ಯೋಜನೆಗಳ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.
ಗುರುವಾರ ಬಳ್ಳಾರಿ ನಗರದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಒಂದು ರಾಜ್ಯ–ಒಂದು ಗ್ರಾಮೀಣ ಬ್ಯಾಂಕ್ ಪ್ರಕ್ರಿಯೆಯಡಿ ಮೇ 1ರಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಸ್ತಿತ್ವಕ್ಕೆ ಬಂದಿದ್ದು, ಇದು ದೇಶದ ಮೂರನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಆಗಿದೆ. ಬಳ್ಳಾರಿಯಲ್ಲಿ ಪ್ರಧಾನ ಕಚೇರಿಯುಳ್ಳ ಈ ಬ್ಯಾಂಕ್ ಪ್ರಸ್ತುತ 1,750 ಶಾಖೆಗಳೊಂದಿಗೆ 1,04,364 ಕೋಟಿ ರೂ.ಗಳ ವಹಿವಾಟು ನಡೆಸುತ್ತಿದೆ ಎಂದರು.
ಗ್ರಾಮೀಣ ಪ್ರದೇಶಗಳ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸಲು ಗ್ರಾಮೀಣ ಬ್ಯಾಂಕುಗಳು ಪ್ರಮುಖ ಪಾತ್ರವಹಿಸಬೇಕಿದೆ. ಈ ಕಾರಣಕ್ಕೆ ರಾಜ್ಯದಲ್ಲಿ ಎಲ್ಲಾ ಗ್ರಾಮೀಣ ಬ್ಯಾಂಕುಗಳನ್ನು ವಿಲೀನಗೊಳಿಸಿ ಒಂದೇ ಬ್ಯಾಂಕ್‌ನ್ನು ರಚಿಸಲಾಗಿದೆ. ಗ್ರಾಮೀಣ ಜನರ ಆರ್ಥಿಕ ಅಗತ್ಯಕ್ಕೆ ಅನುಗುಣವಾಗಿ ಸಾಲ ಯೋಜನೆಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು.
ಬ್ಯಾಂಕ್‌ರಹಿತ ಪ್ರದೇಶಗಳಲ್ಲಿ ಹೊಸ ಶಾಖೆಗಳನ್ನು ತೆರೆಯುವ ಕಾರ್ಯವನ್ನು ತೀವ್ರಗೊಳಿಸಬೇಕು. ಕೃಷಿ ಉನ್ನತೀಕರಣ ಮತ್ತು ಮೌಲ್ಯವರ್ಧನೆಗೆ ಸಂಬಂಧಿಸಿದ ಸಾಲ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ. ಡಿಜಿಟಲೀಕರಣವನ್ನು ಗ್ರಾಮೀಣ ಭಾಗಗಳಿಗೆ ತಲುಪಿಸುವಲ್ಲಿ ಬ್ಯಾಂಕು ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೇಂದ್ರ ಸರ್ಕಾರದ ಸಾಮಾಜಿಕ ಸುರಕ್ಷಾ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಸಹಭಾಗಿತ್ವ ತೋರಿರುವುದನ್ನು ಅವರು ಶ್ಲಾಘಿಸಿದರು.
ಸಭೆಯಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿ ಎಂ. ನಾಗರಾಜು ಮಾತನಾಡಿ, ಗ್ರಾಮೀಣ ಬ್ಯಾಂಕುಗಳು ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸುವ ಶಕ್ತಿ ಹೊಂದಿವೆ. ಕೇಂದ್ರ ಸರ್ಕಾರ ಇವುಗಳನ್ನು ಬಲಪಡಿಸಲು ಬದ್ಧವಾಗಿದೆ ಎಂದರು.
ಕರ್ನಾಟಕ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಶ್ರೀಕಾಂತ ಎ.ಭಂಡಿವಾಡ ಅವರು ಬ್ಯಾಂಕಿನ ಕಾರ್ಯಕ್ಷಮತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನದ ಕುರಿತು ವಿವರಿಸಿದರು.
ನಬಾರ್ಡ್ ಅಧ್ಯಕ್ಷ ಕೆ.ವಿ. ಶಾಜಿ, ಗ್ರಾಮೀಣಾಭಿವೃದ್ಧಿಗೆ ಗ್ರಾಮೀಣ ಬ್ಯಾಂಕುಗಳ ಕೊಡುಗೆ ಹೆಚ್ಚಿಸಲು ನಬಾರ್ಡ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.
ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಾಜುಮದಾರ್ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು.
ಸಭೆಯಲ್ಲಿ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ ಮನೋಜ್ ಎಂ. ಅಯ್ಯಪ್ಪನ್, ನಿರ್ದೇಶಕ ಸುಶೀಲ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮತ್ತು ಇತರರು ಉಪಸ್ಥಿತರಿದ್ದರು.







