Sandur | ಗಣಿ ಲಾರಿಗಳ ನಡುವೆ ಭೀಕರ ಅಪಘಾತ : ಇಬ್ಬರು ಚಾಲಕರು ಗಂಭೀರ

ಸಂಡೂರು : ತಾಲೂಕಿನ ಸಂಡೂರು–ತೋರಣಗಲ್ಲು ಮುಖ್ಯರಸ್ತೆಯ ನಾರಿಹಳ್ಳ ಜಲಾಶಯ ಪಕ್ಕದಲ್ಲಿರುವ ವಂಡರ್ ವ್ಯಾಲಿ ರೆಸಾರ್ಟ್ ಸಮೀಪ ಹಾಗೂ ಕೊಲ್ಲೂರಮ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎರಡು ಗಣಿ ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ವೇಗವಾಗಿ ಸಂಚರಿಸುತ್ತಿದ್ದ ಎರಡು ಲಾರಿಗಳು ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿ, ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಹೊಡೆತಕ್ಕೆ ಇಬ್ಬರು ಚಾಲಕರು ಲಾರಿಗಳೊಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಹೊರತೆಗೆದಿದ್ದಾರೆ.
ಗಾಯಾಳು ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಅಪಘಾತ ಸಂಭವಿಸಿದ ತಕ್ಷಣ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಗಣಿ ಲಾರಿಗಳ ಸಂಚಾರ ಹೆಚ್ಚಿರುವ ಈ ರಸ್ತೆಯಲ್ಲಿ ಸರಿಯಾದ ನಿಯಂತ್ರಣ ಹಾಗೂ ಸುರಕ್ಷತಾ ಕ್ರಮಗಳ ಕೊರತೆಯಿಂದ ಇಂತಹ ಅಪಘಾತಗಳು ಮರುಕಳಿಸುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ತಿಳಿಯುತ್ತಿದ್ದಂತೆ ಸಂಡೂರು ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ.
ಈ ಭಾಗದಲ್ಲಿ ಗಣಿ ಲಾರಿಗಳ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.






