ಸಂಡೂರು | ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ಬೆನ್ನಿಗೆ ನಿಲ್ಲಿ: ಅಧಿಕಾರಿಗಳಿಗೆ ಶಾಸಕಿ ಅನ್ನಪೂರ್ಣ ಸೂಚನೆ

ಸಂಡೂರು: ತಾಲ್ಲೂಕಿನಲ್ಲಿ ಭೀಕರ ಬರಗಾಲ ಆವರಿಸಿದ್ದು, ಸಂಕಷ್ಟದಲ್ಲಿರುವ ರೈತರ ಬೆನ್ನಿಗೆ ನಿಂತು ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಮಾಡಬೇಕು ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಸೂಚಿಸಿದರು.
ಪಟ್ಟಣದ ಎಂ.ವೈ. ಘೋರ್ಪಡೆ ಸಭಾಂಗಣದಲ್ಲಿ ಬುಧವಾರ ನಡೆದ 2026–27ನೇ ಸಾಲಿನ ಎರಡನೇ ತ್ರೈಮಾಸಿಕ ತಾಲ್ಲೂಕು ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಒಟ್ಟು 26,565 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಈ ಪೈಕಿ 9,800 ಹೆಕ್ಟೇರ್ ನೀರಾವರಿ ಪ್ರದೇಶವಾಗಿದೆ. ಮಳೆ ಕೊರತೆಯಿಂದ ಚೋರನೂರು, ತೋರಣಗಲ್ಲು, ವಿಠಲಾಪುರ ಹಾಗೂ ಮೆಟ್ರಿಕಿ ಭಾಗಗಳಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿದ್ದು, ಅಂತರ್ಜಲ ಮಟ್ಟವೂ ಕುಸಿದಿದೆ. ಸರ್ಕಾರ ಘೋಷಿಸಿರುವ ಬೆಳೆ ಪರಿಹಾರವು ಅರ್ಹ ರೈತರಿಗೆ ಸಮರ್ಪಕವಾಗಿ ತಲುಪಬೇಕು. ಎಫ್‌ಐಡಿ ಮತ್ತು ಬೆಳೆ ಸಮೀಕ್ಷೆಯ ಆಧಾರದಲ್ಲಿ ಪರಿಹಾರ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಎರಡನೇ ಬೆಳೆ ಬೆಳೆಯಲು ಆಸಕ್ತಿ ಹೊಂದಿರುವ ರೈತರಿಗೆ ಅಲ್ಪಾವಧಿ ಬೆಳೆಗಳ ಕುರಿತು ಮಾಹಿತಿ ನೀಡಬೇಕು. ಶೇಂಗಾ ಬಿತ್ತನೆ ಬೀಜಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಹಾಗೂ ರೈತರನ್ನು ವಂಚಿಸುವ ದಲ್ಲಾಳಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಹಂಚಿಕೆಯಲ್ಲಿ ರೈತರಿಗೆ ಯಾವುದೇ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಅಬಕಾರಿ ಅಧಿಕಾರಿಗಳಿಗೆ ತರಾಟೆ :
ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಾಸಕಿ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದಾಗ ಮಾರಾಟಗಾರರು ಸಿಗುವುದಿಲ್ಲ ಎಂಬ ಸಬೂಬು ಹೇಳಬಾರದು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ತಾಕೀತು ಮಾಡಿದರು.
ಧೂಳು ನಿಯಂತ್ರಣಕ್ಕೆ ಸೂಚನೆ :
ಕ್ಷೇತ್ರದಲ್ಲಿ ಗಣಿಗಾರಿಕೆಯಿಂದ ಉಂಟಾಗುವ ಧೂಳಿನಿಂದ ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಎಂಬ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜನರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಧೂಳು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ವಿವಿಧ ಇಲಾಖೆಗಳ ಪ್ರಗತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ತಹಶೀಲ್ದಾರ್ ಗ್ರೇಡ್-2 ಸುಧಾ ಅರಮನೆ, ತಾಲ್ಲೂಕು ಪಂಚಾಯಿತಿ ಇಒ ರೇಣುಕಾಚಾರ್ಯಸ್ವಾಮಿ ಬಿ.ಎಂ., ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನೂರುದ್ದೀನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.






